Advertisement

ಪದಾಧಿಕಾರಿಗಳ ಪಟ್ಟಿಗೆ ಒಪ್ಪಿಗೆ ಪಡೆಯಲು ಡಿಕೆಶಿ ಕಸರತ್ತು

09:43 PM Mar 13, 2022 | Team Udayavani |

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯ ಸೋಲಿನ ಅನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪಕ್ಷದ ಪದಾಧಿಕಾರಿಗಳ ನೇಮಕ ಮಾಡಿಕೊಳ್ಳಲು ಮುಂದಾಗಿದ್ದು, ಸೋಮವಾರ ರಾಹುಲ್‌ ಗಾಂಧಿ ಒಪ್ಪಿಗೆ ಪಡೆಯಲು ಕಸರತ್ತು ನಡೆಸಿದ್ದಾರೆ.

Advertisement

ಡಿ.ಕೆ. ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎರಡೂವರೆ ವರ್ಷ ಪೂರೈಸುತ್ತಿದ್ದು, ಪಕ್ಷದ ಪದಾಧಿಕಾರಿಗಳ ನೇಮಕ ಮಾಡಿಕೊಳ್ಳದೇ ಉಪ ಚುನಾವಣಗಳ ಉಸ್ತುವಾರಿ ಹಾಗೂ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಗಳಿಗೆ ಮಾಜಿ ಪದಾಧಿಕಾರಿಗಳನ್ನೇ ಬಳಸಿಕೊಳ್ಳಲಾಗುತ್ತಿದೆ. ಸುಮಾರು 300 ಜನ ಪದಾಧಿಕಾರಿಗಳ ಜಂಬೊ ಪಟ್ಟಿಯನ್ನು ಸಿದ್ದಪಡಿಸಿಕೊಂಡು ದಿಲ್ಲಿಗೆ ತೆರಳಿದ್ದು, ಸೋಮವಾರ ಪಕ್ಷದ ಮುಖಂಡ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಪಟ್ಟಿಗೆ ಅಂತಿಮ ಒಪ್ಪಿಗೆ ಪಡೆಯಲು ಮುಂದಾಗಿದ್ದಾರೆ.

ಕಳೆದ ತಿಂಗಳು ಪದಾಧಿಕಾರಿಗಳ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾಗ ಪಕ್ಷದ ರಾಜ್ಯದ ಎಲ್ಲ ನಾಯಕರ ಅಭಿಪ್ರಾಯ ಪಡೆದು ಪಟ್ಟಿ ಸಿದ್ದಪಡಿಸಿಕೊಂಡು ಬರುವಂತೆ ರಾಹುಲ್‌ ಗಾಂಧಿ ಸಲಹೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅವರ ಸಲಹೆಯಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿಪಕ್ಷದ ನಾಯಕ ಸಿದ್ದರಾಮಯ್ಯ, ಐವರು ಕಾಯಾಧ್ಯಕ್ಷರು ಸೇರಿ ಪಕ್ಷದ ಇತರ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಪಟ್ಟಿ ಸಿದ್ದಪಡಿಸಿಕೊಂಡು ದಿಲ್ಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಪ್ರಯಾಣಿಕನ ಸಾವು: ವಿಮಾನ ತುರ್ತು ಭೂಸ್ಪರ್ಶ

ಸಂಘಟಿತ ಪ್ರಯತ್ನ ಇಲ್ಲ
ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯವಾಗಿ ಸೋಲು ಕಾಣಲು ಮೇಲ್ಮಟ್ಟದಲ್ಲಿ ನಾಯಕರ ಪ್ರಭಾವ ಇದ್ದರೂ, ಕೆಳ ಹಂತದಲ್ಲಿ ಕಾರ್ಯಕರ್ತರ ಸಂಘಟಿತ ಪ್ರಯತ್ನವಿಲ್ಲದಿರುವುದು ಕಾಂಗ್ರೆಸ್‌ ಸೋಲಿಗೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ರಾಜ್ಯದಲ್ಲಿಯೂ ಡಿ.ಕೆ.ಶಿವಕುಮಾರ್‌ ಪಕ್ಷದ ಅಧ್ಯಕ್ಷರಾಗಿ ಎರಡೂವರೆ ವರ್ಷ ಕಳೆದರೂ, ಪಕ್ಷದ ಕಾರ್ಯಕರ್ತರಿಗೆ ಅಧಿಕೃತ ಹುದ್ದೆ ನೀಡದೇ ಕೇವಲ ಹುದ್ದೆಯ ಆಸೆ ತೋರಿಸಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ.
ಆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಪಕ್ಷದಲ್ಲಿ ಅಧಿಕೃತ ಹುದ್ದೆ ನೀಡದೇ ಇದ್ದರೆ, ಮುಂದಿನ ಚುನಾವಣೆಯಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸಿದ್ದರೆ, ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಡಿ.ಕೆ. ಶಿವಕುಮಾರ್‌, ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next