ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದುಬೈ ಪ್ರವಾಸಕ್ಕೆ ಅನುಮತಿ ಕೋರಿದ್ದಾರೆ. ಬುಧವಾರ ದೆಹಲಿ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಅವರು, ಡಿಸೆಂಬರ್ ಮೊದಲ ವಾರದಲ್ಲಿ ವಿದೇಶಿ ಪ್ರವಾಸಕ್ಕೆ ಅನುಮತಿ ಕೋರಿದರು. ಆದರೆ, ನ.26ರಂದು ಈ ಬಗ್ಗೆ ಅಭಿಪ್ರಾಯ ತಿಳಿಸುವುದಾಗಿ ನ್ಯಾಯಾಲಯ ತಿಳಿಸಿತು.
ವಿಚಾರಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಪರ ವಕೀಲರು, ಈ ಹಿಂದೆ ಆರೋಪ ಪಟ್ಟಿಯ ಪ್ರತಿ ನೀಡುವಂತೆ ಇಡಿ ಅಧಿಕಾರಿಗಳಿಗೆ ಮನವಿ ಮಾಡಲಾಗಿ ಕೆಲವೇ ದಿನಗಳಲ್ಲಿ ನೀಡುವುದಾಗಿ ತಿಳಿಸಿದ್ದರು.
ಆದರೆ, ಇನ್ನೂ ಸಮರ್ಪಕವಾಗಿ ಮಾಹಿತಿ ನೀಡಿಲ್ಲ. ಹೀಗಾಗಿ, ವಾದ ಮಂಡಿಸಲು ಸಮಯಾವಕಾಶ ಬೇಕು ಎಂದು ಮನವಿ ಮಾಡಿದರು. ಇದಕ್ಕೆ ಒಪ್ಪಿದ ನ್ಯಾಯಾಲಯ, 2023 ಜ.18ಕ್ಕೆ ವಿಚಾರಣೆ ಮುಂದೂಡಿತು.
ತನಿಖೆ ರದ್ದತಿಗೆ ಇಡಿ ವಿರೋಧ: ಇನ್ನೊಂದೆಡೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿರುವ ಪ್ರಕರಣದ ಕುರಿತ ಸಂಪೂರ್ಣ ತನಿಖೆಯನ್ನೇ ರದ್ದುಗೊಳಿಸಬೇಕು ಎಂದು ಕೋರಿ ದೆಹಲಿ ಹೈಕೋರ್ಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಇಡಿ ವಿರೋಧ ವ್ಯಕ್ತಪಡಿಸಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಡಿ ವತಿಯಿಂದ ದಾಖಲಿಸಲಾದ ಎರಡು ಇಸಿಐಆರ್ ಗಳಲ್ಲಿರುವ ಸಂಗತಿಗಳು ಒಂದಕ್ಕೊಂದು ಪೂರಕವಾಗಿದ್ದರೂ ಇದನ್ನು ಮರುತನಿಖೆ ಎಂದು ಕರೆಯಲು ಆಗುವುದಿಲ್ಲ ಎಂದು ಅಫಿಡವಿಟ್ ನಲ್ಲಿ ಇಡಿ ಉಲ್ಲೇಖಿಸಿದೆ.