Advertisement

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

05:13 PM Jan 20, 2022 | Team Udayavani |

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಸ್ಪಂದಿಸಿದ್ದು, ಈಗ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ. ನಿಯಮ ಉಲ್ಲಂಘಿಸಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಕ್ರಮ ಜರುಗಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

Advertisement

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದ ಅವರು ,ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರವಾಗಿ ನಾನು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ನಮ್ಮ ಪಕ್ಷದ ನಿಯೋಗ ಅವರನ್ನು ಭೇಟಿ ಮಾಡಿತ್ತು. ಈ ವಿಚಾರವಾಗಿ ಇಂದು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಅಧಿಕಾರಿಗಳು ಕ್ರಮ ಕ್ರಮೈಗೊಳ್ಳದಿದ್ದರೆ, ಅವರ ವಿರುದ್ಧ ಹೋರಾಟ ಮಾಡಲು ಕಾರ್ಯತಂತ್ರ ರೂಪಿಸುತ್ತೇವೆ ಎಂದರು.

ಕೇವಲ ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ, ಆಡಳಿತ ಪಕ್ಷದವರ ವಿರುದ್ಧ ಪ್ರಕರಣ ದಾಖಲಿಸದಿದ್ದರೆ, ನಾವು ಸುಮ್ಮನೆ ಕೂರುವುದಿಲ್ಲ. ನಾವು ಏನು ಹೋರಾಟ ಮಾಡಬೇಕೋ ಅದನ್ನು ಮಾಡುತ್ತೇವೆ.
ಈ ವಿಚಾರವಾಗಿ ಸಿದ್ದರಾಮಯ್ಯ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ಮೈಸೂರಿನಲ್ಲಿ ಇದ್ದರು. ನಾನು ಕೂಡ ಊರಲ್ಲಿ ಇರಲಿಲ್ಲ. ಮುಖ್ಯಮಂತ್ರಿಗಳು ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇವೆ. ಮುಖ್ಯ ಕಾರ್ಯದರ್ಶಿಗಳು ಕೂಡ ಕೋವಿಡ್ ನಿಯಮ ವಿರುದ್ಧವಾಗಿ ನಡೆದುಕೊಂಡ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ಈ ಇಬ್ಬರೂ ಕ್ರಮಕ್ಕೆ ಆದೇಶಿಸಿದ್ದು, ಈಗ ಪ್ರಕರಣ ದಾಖಲಿಸುವುದು ಉಪ ಆಯುಕ್ತರುಗಳಿಗೆ ಬಿಟ್ಟ ವಿಚಾರ. ಅವರ ನಡೆ ನೋಡಿ, ಅವರ ವಿರುದ್ಧ ಹೇಗೆ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತಿದ್ದೇವೆ,ಎಂದರು.

ಕೇವಲ ಒಬ್ಬರ ಮೇಲೆ ಪ್ರಕರಣ ದಾಖಲಿಸುವುದಲ್ಲ. ನಿಯಮ ಉಲ್ಲಂಘಿಸಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ, ನಿಯಮ ಉಲ್ಲಂಘಿಸಿರುವವರ ಪಟ್ಟಿ ತರಿಸಿಕೊಂಡು, ಆಯಾ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ,ಎಂದರು.

ಬಿಜೆಪಿಯಲ್ಲೇ ಕೋವಿಡ್ ನಿರ್ಬಂಧದ ಬಗ್ಗೆ ಗೊಂದಲ ಸೃಷ್ಟಿಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರು ಜನರ ಪ್ರಾಣ ತೆಗೆಯುತ್ತಿದ್ದಾರೆ. ಬದುಕಿರುವವರನ್ನು ಸಾಯಿಸುತ್ತಿದ್ದಾರೆ. ವ್ಯಾಪಾರ, ವಹಿವಾಟು ಏನಾಗಬೇಕು? ವಿದೇಶಗಳಲ್ಲಿ ಯಾವುದೇ ನಿರ್ಬಂಧ ಬೇಡ ಎಂದು ತೀರ್ಮಾನಿಸಿದ್ದಾರೆ. ನಾನು ಹೈದರಾಬಾದ್ ಗೆ ಹೋಗಿದ್ದೆ, ಅಲ್ಲಿ ಯಾವುದೇ ನಿರ್ಬಂಧವಿಲ್ಲ. ಸರ್ಕಾರ ಇಲ್ಲಿ ಯಾಕೆ ಜನಸಾಮಾನ್ಯರಿಗೆ ಈ ರೀತಿ ಸುಮ್ಮನೆ ತೊಂದರೆ ನೀಡುತ್ತಿದೆ? ಆರೋಗ್ಯದ ವಿಚಾರದಲ್ಲಿ ಅಗತ್ಯವಾದ ಕ್ರಮ ಕೈಗೊಳ್ಳಲಿ, ಆದರೆ ಅವರ ದಿನನಿತ್ಯದ ಬದುಕಿನ ಸಂಪಾದನೆ ಹಾಳು ಮಾಡುವುದೇಕೆ? ಬ್ಯಾಂಕ್ ನವರು ಅವರಿಗೆ ನೀಡಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುತ್ತಾರಾ? ಅಥವಾ ಸರ್ಕಾರದವರು ಅವರ ಬಾಡಿಗೆಯನ್ನಾದರೂ ಮನ್ನಾ ಮಾಡುತ್ತಾರಾ? ವ್ಯಾಪಾರಸ್ಥರು, ಹೊಟೇಲ್ ಉದ್ಯಮದವರು ಏನಾಗಬೇಕು? ಹೊಟೇಲ್ ಕ್ಷೇತ್ರದವರು ಕೇಳುತ್ತಿರುವುದರಲ್ಲಿ ಅರ್ಥವಿದೆ’ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next