Advertisement

ವಿಶ್ವಾಸ ಗಳಿಕೆಗೆ ನಾಯಕರ ಬಳಿ ತೆರಳಿದ ಡಿಕೆಶಿ

10:10 AM Mar 16, 2020 | Lakshmi GovindaRaj |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿರುವ ಡಿ.ಕೆ.ಶಿವಕುಮಾರ್‌ ಈಗ ಪಕ್ಷದ ನಾಯಕರ ವಿಶ್ವಾಸ ಗಳಿಸಲು ಎಲ್ಲಾ ನಾಯಕರನ್ನು ಭೇಟಿ ಮಾಡುವ ಪ್ರಯತ್ನ ನಡೆಸಿದ್ದಾರೆ. ಕೆಪಿಸಿಸಿಗೆ ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡ ದಿನವೇ ವಿಧಾನಸಭೆ ಮೊಗ ಸಾಲೆ ಯಲ್ಲಿ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದರು.

Advertisement

ಆದರೂ, ಭಾನುವಾರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಹಿರಿಯ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಇನ್ನೋರ್ವ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ ಹಾಗೂ ನಿರ್ಗಮಿತ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಮನೆಗಳಿಗೆ ತೆರಳಿ ಧನ್ಯವಾದ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವುದು, ಆಡಳಿತ ಪಕ್ಷವಾದ ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ನಡೆಸಲು ಪ್ರಮುಖವಾಗಿ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಅಲ್ಲದೇ ಡಿ.ಕೆ.ಶಿವಕುಮಾರ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವುದಕ್ಕೆ ಸಿದ್ದರಾಮಯ್ಯ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಹೈಕಮಾಂಡ್‌ ಸಿದ್ದರಾಮಯ್ಯ ಅವರ ಬೇಡಿಕೆ ಗಳಿಗೂ ಸ್ಪಂದಿಸುವ ಮೂಲಕ ಡಿ.ಕೆ.ಶಿವಕುಮಾರ್‌ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಿದೆ.

ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಡಿ.ಕೆ.ಶಿವಕುಮಾರ್‌ ಅವರ ಮುಂದಿನ ನಡೆಗೆ ಸಾಕಷ್ಟು ಸಮಸ್ಯೆಗೆ ಕಾರಣವಾಗುತ್ತದೆ ಎನ್ನುವ ಕಾರಣಕ್ಕೆ ಅವರ ವಿಶ್ವಾಸ ಗಳಿಸಿ ಹೊಂದಾಣಿಕೆಯಿಂದ ಪಕ್ಷ ಸಂಘಟಿಸಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರೊಂದಿಗೆ ಹೊಂದಾಣಿಕೆಯಿಂದ ಹೋಗುವಂತೆ ಹೈಕಮಾಂಡ್‌ ಕೂಡ ಸಲಹೆ ನೀಡಿದೆ ಎನ್ನಲಾಗಿದ್ದು, ಅದೇ ಕಾರಣಕ್ಕೆ ಡಿ.ಕೆ.ಶಿವಕುಮಾರ್‌ ಮುಂದಿನ ಮೂರೂವರೆ ವರ್ಷ ಪಕ್ಷದ ಯಾವುದೇ ನಾಯಕರ ಜೊತೆ ಆಂತರಿಕ ಸಂಘರ್ಷಕ್ಕೆ ಇಳಿಯದೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಹೊಂದಿದ್ದಾರೆಂದು ತಿಳಿದು ಬಂದಿದೆ.

Advertisement

ಖರ್ಗೆ ಸಲಹೆ ಅಗತ್ಯ: ಡಿ.ಕೆ.ಶಿವಕುಮಾರ್‌ ಅಧ್ಯಕ್ಷರಾಗಲು ಸಿದ್ದರಾಮಯ್ಯ ಬಣ ವಿರೋಧ ವ್ಯಕ್ತಪಡಿಸಿದಾಗ, ಮೂಲ ಕಾಂಗ್ರೆಸ್‌ನ ಕೆಲವು ನಾಯಕರು ತಾವೇ ಅಧ್ಯಕ್ಷ ಗಾದಿಗೇರಲು ಕಸರತ್ತು ನಡೆಸಿದಾಗ ಮಲ್ಲಿಕಾರ್ಜುನ ಖರ್ಗೆಯವರು ಡಿ.ಕೆ.ಶಿವಕುಮಾರ್‌ ಪರವಾಗಿ ಹೈಕಮಾಂಡ್‌ ಮಟ್ಟದಲ್ಲಿ ಲಾಬಿ ಮಾಡಿದ್ದರು ಎನ್ನಲಾಗಿದೆ. ಅದೇ ಕಾರಣಕ್ಕೆ ಡಿ.ಕೆ.ಶಿವಕುಮಾರ್‌ ಮುಂದಿನ ದಿನಗಳಲ್ಲಿಯೂ ತಮ್ಮ ಹೋರಾಟಕ್ಕೆ ಅವರ ಸಹಕಾರ, ಆಶೀರ್ವಾದ ಅಗತ್ಯ ಎನ್ನುವ ಕಾರಣಕ್ಕೆ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ.

ನಿರ್ಗಮಿತ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಇನ್ನೋರ್ವ ಹಿರಿಯ ದಲಿತ ನಾಯಕ ಕೆ.ಎಚ್‌.ಮುನಿಯಪ್ಪ ಅವರನ್ನೂ ಭೇಟಿ ಮಾಡಿ, ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಪಕ್ಷದ ನಾಯಕರ ಭೇಟಿ ವೇಳೆ ಅವರೊಂದಿಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ಜೊತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next