ಮಂಗಳೂರು: ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಕೊರೊನಾ ಸೋಂಕನ್ನು ನಿಯಂತ್ರಿಸಬೇಕೆಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಸಲಹೆ ಮಾಡಿದ್ದಾರೆ.
ಸೆೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ಸೋಂಕು ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುತ್ತಿದೆ, ಇದೀಗ ಪ್ರತಿದಿನ 15,000 ತಪಾಸಣೆ ಮಾಡಲಾಗುತ್ತಿದ್ದು, ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು. ಇದೇ ರೀತಿ ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರು ಹೊರಗೆ ಬಾರದಂತೆ ಆರೋಗ್ಯ ಇಲಾಖೆಯ ಸಿಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ನಿಗಾವಹಿಸಬೇಕು ಎಂದರು.
ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಂಬಂಧ ಪಟ್ಟ ಸಿಬಂದಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಗುರುತಿಸ ಬೇಕು, ಸೋಂಕು ಹೊಂದಿದ್ದಲ್ಲಿ ಅವರನ್ನು ಕಡ್ಡಾಯವಾಗಿ ಕೊರೊನಾ ಕೇರ್ ಸೆಂಟರ್‌ಗಳಿಗೆ ದಾಖಲಿಸ ಬೇಕು; ಆ ಮೂಲಕವೂ ಸೋಂಕನ್ನು ನಿಯಂತ್ರಿಸಬಹುದು ಎಂದರು.
ಸೋಂಕಿತರು ಆಯುಷ್ಮಾನ್ ಕಾರ್ಡ್ ಹೊಂದಿರುವ ಬಗ್ಗೆ ಪರಿಶೀಲಿಸಿ ಅವರಿಗೆ ಸರಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದರು.
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ ಜನಸಾಮಾನ್ಯರು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸೋಂಕನ್ನು ನಿಯಂತ್ರಿಸಲು ಸಾಧ್ಯ ಎಂದರಲ್ಲದೇ ಜಿಲ್ಲೆಗೆ ಪ್ರತಿದಿನ ಬರುವ ಲಸಿಕೆಯನ್ನು ಆಯಾ ದಿನವೇ ಫಲಾನುಭವಿಗಳಿಗೆ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶಾಸಕ ಡಿ. ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನವಾಣೆ, ಡಿಸಿಪಿ ಹರಿರಾಂ ಶಂಕರ್, ಜಿ. ಪಂ. ಉಪಕಾರ್ಯದರ್ಶಿ ಆನಂದ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್ ಕುಮಾರ್ ಉಪಸ್ಥಿತರಿದ್ದರು.