ಚಿಕ್ಕಮಗಳೂರು: ಮತದಾನ ಮಾಡಲು ಆಲಸ್ಯ ಮಾಡದೇ ಇದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಅರಿತು ಮತಗಟ್ಟೆಗಳ ಕಡೆ ಪ್ರತಿಯೊಬ್ಬ ಮತದಾರರು ತಮ್ಮ ಹೆಜ್ಜೆಗಳನ್ನು ಇಡಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಸಿ. ಸತ್ಯಭಾಮಾ ಹೇಳಿದರು.
ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಮೂಡಿಸುವ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೇ 12 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು ಅಂದು ತಮಗೆಲ್ಲರಿಗೂ ಸಾಂವಿಧಾನಿಕವಾಗಿ ನೀಡಿರುವ ಹಕ್ಕಾದ ಮತದಾನವನ್ನು ಕರ್ತವ್ಯವೆಂದು ಭಾವಿಸಿ ಮತದಾನ ಮಾಡಬೇಕು ಎಂದರು.
ಮತದಾನ ಪವಿತ್ರವಾದುದು. ಮತದಾರರು ಆಮಿಷಗಳಿಗೆ ಬಲಿಯಾಗಬಾರದು. ನಾಡಿನ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಉತ್ತಮ ಅಭ್ಯರ್ಥಿ ಆಯ್ಕೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿ ಕಡಿಮೆ ತದಾನವಾಗಿರುವುದು ನಾವು ಕಾಣಬಹುದಾಗಿದೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ. 78 ರಷ್ಟು ಮತದಾನವಾಗಿತ್ತು. ಗ್ರಾಮೀಣ ಭಾಗದಲ್ಲಿ ಶೇ. 85ಕ್ಕೂ ಹೆಚ್ಚು ಮತದಾನವಾದರೆ, ನಗರ ಪ್ರದೇಶದಲ್ಲಿ ಶೇ. 68ರಷ್ಟು ಮಾತ್ರ ಮತದಾನವಾಗಿತ್ತು. ಈ ಬಾರಿ ಚುನಾವಣೆಯಲ್ಲಿ ಶೇ. 95ಕ್ಕೂ ಹೆಚ್ಚು ಮತದಾನವಾಗುವ ನಿರೀಕ್ಷೆ ಇದೆ ಎಂದರು.
ಇದೇ ಸಂದರ್ಭದಲ್ಲಿ ಜಾಥಾಕ್ಕೆ ಆಗಮಿಸಿದ್ದವರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಕ್ರೀಡಾ ಪಟುಗಳು ನಗರದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿಯ ಘೋಷಣೆಗಳನ್ನು ಕೂಗುವುದರೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಸಿ. ಬಸವರಾಜಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಗೀತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಜುಳಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ನೆಹರು ಯುವ ಕೇಂದ್ರದ ವ್ಯವಸ್ಥಾಪಕ ಮಂಜುನಾಥ್ ರಾವ್ ಇದ್ದರು.