ಬೆಂಗಳೂರು : ಸರ್ಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವುದನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ವಿಧಾನಸೌಧದತ್ತ ನುಗ್ಗಲು ಮುಂದಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ಘರ್ಷಣೆ ಉಂಟಾಗಿದ್ದು, ಮೇಘಶ್ರಿ ಎಂಬ ವಿದ್ಯಾರ್ಥಿನಿ ಪೊಲೀಸರ ಲಾಠಿ ತಗುಲಿ ಅಸ್ವಸ್ಥಳಾಗಿದ್ದು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ಕೆಲ ವಿದ್ಯಾರ್ಥಿಗಳು ಸಿಐಡಿ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. 100 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ವಿಧಾನಸೌಧ ಬಳಿ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.ಪ್ರತಿಭಟನಾ ನಿರತರು ಸ್ಥಳಕ್ಕೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಕ್ಷಣ ಆಗಮಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಎಸ್‌ಓಯು ಮುಚ್ಚಬಾರದು ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎಸ್.ಎ. ರಾಮ್‌ದಾಸ್ ಹೋರಾಟ ನಡೆಸುತ್ತಿದ್ದು, ಸರ್ಕಾರ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಎಬಿವಿಪಿ ಸರ್ಕಾರ ನಿರ್ಧಾರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದೆ.