ಬೆಳಗಾವಿ: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜಗಳು ಹಾಗೂ ಅಗತ್ಯ ಗೊಬ್ಬರವನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಒಂದು ವೇಳೆ ಇದಕ್ಕೆ ಸಂಬಂಧಿಸಿದಂತೆ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ಕೃಷಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮಳೆಯಾದ ನಂತರ ಬಿತ್ತನೆ ಬೀಜಗಳು ಮತ್ತು ಗೊಬ್ಬರಕ್ಕಾಗಿ ರೈತರಿಂದ ದಿಢೀರ್ ಬೇಡಿಕೆ ಬರುತ್ತದೆ. ಅಂತಹ ಸಂದರ್ಭದಲ್ಲಿ ಯಾವುದೇ ಅನಾನುಕೂಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುಂಚಿತವಾಗಿಯೇ ಬೀಜ-ಗೊಬ್ಬರಗಳ ಸಮರ್ಪಕ ದಾಸ್ತಾನು ಮಾಡಿಕೊಳ್ಳಬೇಕು. ರೈತರಿಗೆ ಮಾಹಿತಿ ಒದಗಿಸಲು ಅಥವಾ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಬಿತ್ತನೆ ಬೀಜ ವಿತರಿಸುವಾಗ ಗುಣಮಟ್ಟ ಖಾತ್ರಿಪಡಿಸಿಕೊಂಡು ರೈತರಿಗೆ ಪೂರೈಸಬೇಕು. ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ನೀರಿನ ಕೊರತೆಯಿಂದಾಗಿ ರೈತರು ಕಬ್ಬಿನ ಬದಲಾಗಿ ಪರ್ಯಾಯ ಬೆಳೆ ಬೆಳೆಯಲು ಮುಂದಾದರೆ ಅಗತ್ಯವಾಗಿರುವ ಪರ್ಯಾಯ ಬೀಜಗಳ ದಾಸ್ತಾನು ಮಾಡಿಕೊಳ್ಳಬೇಕು. ಭೂಮಿಯ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಶಾಲ್ ಆರ್. ತಿಳಿಸಿದರು.
ಜಿಲ್ಲೆಯಲ್ಲಿ ಮಳೆ ಕೊರತೆ: ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ಶೇ. 67ರಷ್ಟು ಮಳೆಯ ಕೊರತೆ ಉಂಟಾಗಿದೆ. ಪ್ರಸಕ್ತ ಸಾಲಿನ ಜನೇವರಿ ತಿಂಗಳಿನಿಂದ ಇಲ್ಲಿಯವರೆಗೆ 48 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಇದುವರೆಗೆ ಕೇವಲ 16 ಮಿ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದರು.
Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬೀಜ-ಗೊಬ್ಬರಗಳ ಲಭ್ಯತೆ, ಕೃಷಿ ವಿಮಾ ಯೋಜನೆ ಅನುಷ್ಠಾನ ಹಾಗೂ ಕೃಷಿ ಅಭಿಯಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಮುಂಗಾರು ಹಂಗಾಮಿಗಾಗಿ ಜಿಲ್ಲೆಗೆ ಅಗತ್ಯವಿರುವ ಬೀಜ-ಗೊಬ್ಬರಗಳ ಸಮರ್ಪಕ ದಾಸ್ತಾನು ಇರುತ್ತದೆ. ರೈತರ ಬೇಡಿಕೆಗೆ ಅನುಗುಣವಾಗಿ ಬೀಜ-ಗೊಬ್ಬರಗಳ ವಿತರಣೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು. ರೈತರಿಗೆ ಅಗತ್ಯವಿರುವ ಬೀಜ-ಗೊಬ್ಬರಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಸಹಕಾರ ನೀಡಬೇಕು ಎಂದು ಬೀಜ-ಗೊಬ್ಬರ ಮಾರಾಟಗಾರರಿಗೂ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಬಿತ್ತನೆ ಬೀಜ, ಗೊಬ್ಬರ-ಕೀಟನಾಶಕಗಳನ್ನು ಖರೀದಿಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ಬಿಡುಗಡೆಗೊಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಉಪನಿರ್ದೇಶಕರಾದ ಡಾ.ಎಚ್.ಡಿ.ಕೋಳೇಕರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಹಕಾಟಿ, ಕೃಷಿ, ಸಹಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಕೃಷಿ ಅಭಿಯಾನ
ಕೃಷಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಕೃಷಿ ಇಲಾಖೆಯ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷಣೆಯೊಂದಿಗೆ ಮೇ ತಿಂಗಳಿನಲ್ಲಿ ಜಿಲ್ಲಾದ್ಯಂತ ಕೃಷಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಈ ಅಭಿಯಾನದ ಆಶಯದ ಪ್ರಕಾರ ಪ್ರತಿ ರೈತರಿಗೂ ಮಾಹಿತಿ ಒದಗಿಸುವ ಕೆಲಸವಾಗಬೇಕು. ಮೂರು ದಿನಗಳ ಕೃಷಿ ಅಭಿಯಾನದಲ್ಲಿ ಮೊದಲ ಎರಡು ದಿನಗಳಲ್ಲಿ ಪಂಚಾಯಿತಿ ಮಟ್ಟದಲ್ಲಿ ಅರಿವು ಮೂಡಿಸಲಾಗುವುದು ಮೂರನೇ ದಿನ ಹೋಬಳಿ ಮಟ್ಟದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ತಿಳಿಸಿದರು.