ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಬೇಕು ಎನ್ನುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾದ ಬಳಿಕ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಟ್ವೀಟ್‌ಗಳ ಮೂಲಕ ನನ್ನ ಹೇಳಿಕೆ ಮನದಾಳದ ಮಾತು, ಇದಕ್ಕೆ ರಾಜಕೀಯದ ಬಣ್ಣ ಬೇಡ’ ಎಂದು ಬರೆದಿದ್ದಾರೆ.
ನಾಡಿನ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಬೇಕಿತ್ತು ಎಂಬ ನನ್ನ ಹೇಳಿಕೆ ಕರ್ನಾಟಕದ ಹಲವು ದಶಕಗಳ ರಾಜಕೀಯ ವಾಸ್ತವತೆಯನ್ನು ಆಧರಿಸಿದ ಮನದಾಳದ ಮಾತು. ಈ ಹೇಳಿಕೆಗೆ ರಾಜಕೀಯದ ಬಣ್ಣಕಟ್ಟಿ ಅಪಾರ್ಥ ಕಲ್ಪಿಸುವಂತೆ ವಿಶ್ಲೇಷಿಸುವುದು ಆರೋಗ್ಯಕರವಲ್ಲ ಎಂದು ಮೊದಲ ಟ್ವೀಟ್‌ನಲ್ಲಿ ಬರೆದಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ, ಈ ಹೇಳಿಕೆಯ ಮೂಲಕ ರಾಜಕೀಯ ಲಾಭ ಪಡೆಯುವ ಕೀಳು ಅಭಿರುಚಿ ನನ್ನದಲ್ಲ. ಖರ್ಗೆಯವರದು ಪಕ್ಷ , ಜಾತಿ ಎಲ್ಲವನ್ನೂ ಮೀರಿದ ಮಹೋನ್ನತ ವ್ಯಕ್ತಿತ್ವ ಎನ್ನುವುದನ್ನು ನಾವು ಮರೆಯಬಾರದು ಎಂದು ಬರೆದಿದ್ದಾರೆ.
ಸಿದ್ದರಾಮಯ್ಯ ಟ್ವೀಟ್
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಚಿಂಚೋಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದಲ್ಲಿ ಖರ್ಗೆ ಅವರೇ ಮುಖ್ಯಮಂತ್ರಿಯಾಗಬೇಕಿತ್ತು ಎಂದು ಹೇಳಿಕೆ ನೀಡಿದ್ದರು.