ಗದಗ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಗೋವಾದಲ್ಲಿ ಸಿಲುಕಿದ್ದ 3,195 ಜನರನ್ನು ಜಿಲ್ಲೆಗೆ ಉಚಿತ ಹಾಗೂ ಸುರಕ್ಷಿತವಾಗಿ ಕರೆ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ವಲಸೆ ಕಾರ್ಮಿಕರು, ಪ್ರವಾಸಿಗರು, ಯಾತ್ರಾರ್ಥಿಗಳು ವಿದ್ಯಾರ್ಥಿಗಳು ಸೇರಿ 3,195 ಜನರನ್ನು ವಾಪಸ್ ಕರೆತರಲಾಗಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ ಬೇರೆ ರಾಜ್ಯದಿಂದ ಬಂದಿರುವ 212 ಜನರನ್ನು 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಸ್ವಂತ ಸ್ಥಳಕ್ಕೆ ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕೆಲವರು ತಮ್ಮ ಸುರಕ್ಷತೆ ಕಡೆಗಣಿಸಿ ಕ್ವಾರಂಟೈಲ್ ನಲ್ಲಿರುವ ಸಂಬಂಧಿಕರು, ಮಕ್ಕಳನ್ನು ಭೇಟಿ ಮಾಡುತ್ತಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಮುಂದಿನ ಒಂದೆರಡು ವರ್ಷಗಳು ಕೋವಿಡ್ ಜೊತೆಗೇ ಬದುಕುವುದು ಅನಿವಾರ್ಯ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೋವಿಡ್ ತಡೆಗಾಗಿ ಸರಕಾರ ನಿರ್ದೇಶಿಸಿರುವಂತೆ ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದರು. ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಕೃಷಿ ಕಾರ್ಯಗಳು ಚುರುಕುಗೊಂಡಿವೆ. ಮುಂಗಾರಿನಲ್ಲಿ 2.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದ್ದು, ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಬಿತ್ತನೆ ಬೀಜ, ರಸಗೊಬ್ಬರದ ದಾಸ್ತಾನು ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಮ್ಸ್‌ನ ಕೋವಿಡ್ ಟೆಸ್ಟ್ ಲ್ಯಾಬ್‌ನಲ್ಲಿ ಪ್ರತಿದಿನ 40(ಸ್ಯಾಂಪಲ್ಸ್) ಮಾದರಿಗಳನ್ನು ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಗುರುತಿಸಲಾದ ಹೈರಿಸ್ಕ್ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ಸರ್ವೇ ನಡೆಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶದನಂತೆ ಕಂಟೇನ್ಮೆಂಟ್ ಪ್ರದೇಶ ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಲಾಕ್‌ಡೌನ್‌ನಿಂದ ವಿನಾಯತಿ ನೀಡಿದ್ದು, ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ ಕಡ್ಡಾಯ ಮಾಡಲಾಗಿದೆ ಎಂದರು.
ಜಿಲ್ಲಾ ಪೊಲೀಸರ್ ವರಿಷ್ಠಾಧಿಕಾರಿ ಯತೀಶ ಎನ್., ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆನಂದ ಕೆ. ಸುದ್ದಿಗೋಷ್ಠಿಯಲ್ಲಿದ್ದರು.