ದಾವಣಗೆರೆ: ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಲಸಿಕೆ ಪಡೆಯುವ ಬಗ್ಗೆ ಜಿಲ್ಲಾಡಳಿತದ ಅಧಿಕಾರಿಗಳು ಶುಕ್ರವಾರ ನಗರದ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದರು.
ಇಲ್ಲಿಯ ಬಾಷಾನಗರ, ಬೀಡಿ ಲೇಔಟ್, ಆಜಾದ್‌ನಗರ, ಮೆಹಬೂಬ್ ನಗರ, ಶಿವ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ, ತಹಶೀಲ್ದಾರ್ ಗಿರೀಶ್ ಸೇರಿದಂತೆ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರದ ಕುರಿತು ಅರಿವು ಮೂಡಿಸಿದರು.
ಈ ವೇಳೆ ಆಶಾ ಕಾರ್ಯಕರ್ತೆಯರು, ಜನಸಂದಣಿ ಪ್ರದೇಶದಿಂದ ದೂರವಿರಿ. ನಿಮ್ಮ ಕಣ್ಣು, ಮೂಗು, ಬಾಯಿಗಳನ್ನು ಮುಟ್ಟಿಕೊಳ್ಳಬೇಡಿ, 1977ಕ್ಕೆ ಮೊದಲು ಹುಟ್ಟಿದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು, ಕೈಗಳನ್ನು ಸ್ವತ್ಛವಾಗಿಟ್ಟುಕೊಳ್ಳಿ ಎಂಬ ಘೋಷಣೆಗಳೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತ ಮಾಸ್ಕ್ ವಿತರಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಕಳೆದ ವರ್ಷ ಹಳೆ ದಾವಣಗೆರೆ ಕೊರೊನಾ ಗಂಡಾಂತರ ಎದುರಿಸಿ, ಅದರಿಂದ ಪಾರಾಗಿದೆ ಎಂಬುದು ನಮಗೆಲ್ಲ ತಿಳಿದ ವಿಚಾರ. ಈ ದೃಷ್ಟಿಯಿಂದ ನಾವು ಈ ಭಾಗದಲ್ಲಿ ಹೆಚ್ಚಿನ ಆದ್ಯತೆ ನೀಡಿ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಲಸಿಕೆ ಹಾಕಿಸಿಕೊಳ್ಳುವುದು ಹೀಗೆ ಕೋವಿಡ್-19 ಕುರಿತು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದೇವೆ ಎಂದರು.
ಈಗಾಗಲೇ ಜಿಲ್ಲಾದ್ಯಂತ ಒಂದು ಲಕ್ಷದ 22ಸಾವಿರ ಜನರಿಗೆ ಲಸಿಕೆ ಹಾಕಿಸಿದ್ದು, 45 ವರ್ಷದ ಮೇಲ್ಪಟ್ಟ 93 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಬೇಕು. ಆದ ಕಾರಣ ಈ ಭಾಗದ ಸ್ಥಳೀಯ ಕಾರ್ಪೋರೇಟರ್, ಮುಖಂಡರ ಸಮ್ಮುಖದಲ್ಲಿ ಲಸಿಕಾ ಅಭಿಯಾನವನ್ನು ಏರ್ಪಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಲಸಿಕಾ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮನ್ನು ತಾವು ಕೊರೊನಾದಿಂದ ಸಂಭವಿಸುವ ಮರಣದಿಂದ ರಕ್ಷಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಡಿ ಈಗಾಗಲೇ 115ಉಪಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ಪ್ರತಿ ಒಂದು ಉಪಕೇಂದ್ರಕ್ಕೆ 50ಜನರನ್ನು ಗುರಿ ಮಾಡಿ ಲಸಿಕೆ ನೀಡಲಾಗುತ್ತಿದೆ. ನಗರದಲ್ಲಿ ಒಂದು ದಿನಕ್ಕೆ 10ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಆರು ಸಾವಿರ ಜನರನ್ನು ತಲುಪುತ್ತಿದ್ದೇವೆ. ಇಲ್ಲಿಯವರೆಗೂ ಒಟ್ಟು 93ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಿಸಲು ಎಲ್ಲ ಇಲಾಖೆಯ ಪ್ರತಿನಿಧಿಗಳು ಸಮೀಕ್ಷೆ ನಡೆಸುವ ಮೂಲಕ ಶ್ರಮವಹಿಸುತ್ತಿದ್ದು, ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಎಲ್.ಡಿ., ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ, ಡಾ.ಮುರುಳೀಧರ್, ಡಾ.ರೇಣುಕಾರಾಧ್ಯ, ಡಾ. ನಟರಾಜ್, ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ್ ಬಾರ್ಕಿ, ಡಾ.ಮಂಜುಳ, ಡಾ.ವೇದಮೂರ್ತಿ, ಡಾ.ಸುನಿತ, ಡಾ.ವೆಂಕಟೇಶ್, ಡಾ.ಉಮಾಪತಿ ಸೇರಿದಂತೆ ಇತರೆ ಎಲ್ಲ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು.