Advertisement

ಅರ್ಹ ಮತದಾರರ ಹೆಸರು ತಪ್ಪದಿರಲಿ

09:28 PM Dec 31, 2019 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಅರ್ಹರು ಯಾರು ಕೂಡ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೂತ್‌ ಮಟ್ಟದ ಅಧಿಕಾರಿಗಳು ಎಚ್ಚರಿಕೆಯಿಂದ ಮತದಾರರ ಪಟ್ಟಿ ಪರಿಷ್ಕರಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ನೋಡಲ್‌ ಅಧಿಕಾರಿ ಕೆ.ಜಿ.ಜಗದೀಶ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಕ್ರಮದ ಕುರಿತ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾಗೃತಿ ಮೂಡಿಸಲು ಕಾರ್ಯಕ್ರಮ: ಮತದಾನ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕೆಂದರೆ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಮೊದಲು ಸರಿಪಡಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಪರಿಷ್ಕರಣೆ ಸುಲಭವಾಗಿ ನಡೆಸಬೇಕು. ಈಗಾಗಲೇ ಜಿಲ್ಲಾಡಳಿತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದರು.

ಪರಿಶೀಲನೆ ಅತ್ಯಗತ್ಯ: ಬೂತ್‌ಮಟ್ಟದ ಅಧಿಕಾರಿಗಳು ಹಾಗೂ ಏಜೆಂಟ್‌ಗಳು ತಮ್ಮ ಕರ್ತವ್ಯ ನಿರ್ವಹಿಸಿ ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕು. ಇದರಲ್ಲಿ ಮುಖ್ಯವಾಗಿ ಪಟ್ಟಿಯಿಂದ ಹೆಸರು ತೆಗದು ಹಾಕುವುದಾದರೆ ಎಚ್ಚರಿಕೆ ವಹಿಸಿ ದಾಖಲೆಗಳನ್ನು ಪರಿಶೀಲಿಸಿದ ನಂತರ ಹೆಸರನ್ನು ತೆಗದುಹಾಕಬೇಕಾಗುತ್ತದೆ. ಪುರುಷ ಹಾಗೂ ಸ್ತ್ರೀ ಲಿಂಗ ಅನುಪಾತದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಲ್ಲಿ ಪರಿಶೀಲನೆ ನಡೆಸುವುದು ಅಗತ್ಯ ಎಂದು ಹೇಳಿದರು.

ಪರಿಷ್ಕರಣೆ: ಜಿಲ್ಲಾಧಿಕಾರಿ ಆರ್‌.ಲತಾ ಮಾತನಾಡಿ, ಕಳೆದ ಸೆ.1ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಚಾಲನೆ ನೀಡಿ ಹಂತ ಹಂತವಾಗಿ ನಡೆಸಲಾಗಿದೆ. ಜಿಲ್ಲೆಯ ಬೂತ್‌ ಮಟ್ಟದ ಅಧಿಕಾರಿಗಳು ಹಾಗೂ ಏಜೆಂಟ್‌ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಪಟ್ಟಿಯ ಪರಿಷ್ಕರಣೆ ನಡೆಸಿದ್ದಾರೆ. ಇದಲ್ಲದೆ, ಸಹಾಯವಾಣಿ ಸಂಖ್ಯೆ 1950 ಗೆ ಮತದಾರರಿಂದ ಬರುವ ದೂರು ಪರಿಶೀಲಿಸಲಾಗುತ್ತಿದ್ದು, ಸಹಾಯವಾಣಿ ಮೊಬೈಲ್‌ ಆಫ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Advertisement

ಸಭೆಯಲ್ಲಿ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌, ಅಪರ ಜಿಲ್ಲಾಧಿಕಾರಿ ಆರತಿ, ಉಪವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ಜಿಲ್ಲಾ ನಗರಾಭಿವೃದ್ಧಿ ಕೋಶಾದ ಯೋಜನಾ ನಿರ್ದೇಶಕಿ ರೇಣುಕಾ, ಚಿಕ್ಕಬಳ್ಳಾಪುರ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಕಿಟ್‌ ಗಳನ್ನು ಹೊಂದಿರಬೇಕು. ಕಾರ್ಯನಿರತ ಶಿಕ್ಷಕರು ಸಿಗದಿದ್ದಲ್ಲಿ ನಿವೃತ್ತಿ ಹೊಂದಿರುವ ಶಿಕ್ಷಕರನ್ನು ಬೂತ್‌ ಮಟ್ಟದ ಅಧಿಕಾರಿಗಳಾಗಿ ಆಯ್ಕೆ ಮಾಡಿ ಅವರನ್ನು ಕಾರ್ಯ ಚಟುವಟಿಕೆಗಾರರನ್ನಾಗಿ ಮಾಡಬೇಕು. ಇದರಿಂದ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾರರ ಪಟ್ಟಿಯ ಸರಿ-ತಪ್ಪುಗಳನ್ನು ತಿದ್ದುಪಡಿ ಮಾಡಲು ಸಹಕಾರಿಯಾಗುತ್ತದೆ.
-ಡಾ.ಕೆ.ಜಿ.ಜಗದೀಶ್‌, ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ

Advertisement

Udayavani is now on Telegram. Click here to join our channel and stay updated with the latest news.

Next