ಹಿರೇಕೆರೂರ: ಕೋವಿಡ್ 19 ಸೋಂಕು ನಿಯಂತ್ರಿಸಲು ಲಾಕ್‌ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಕೋವಿಡ್ 19 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ. ಆದರೆ ಇದರಿಂದ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮುಂಗಾರು ಆರಂಭಕ್ಕೆ ಮುನ್ನ ಕೃಷಿ ಚಟುವಟಿಕೆ ಚುರುಕುಗೊಂಡಿವೆ.
ರೈತರು ರಾಸಾಯನಿಕ ಗೊಬ್ಬರ, ಬೀಜ ಸಂಗ್ರಹಕ್ಕೆ ಮುಂದಾಗುತ್ತಿದ್ದಾರೆ. ಹೊಲಗಳನ್ನು ಉಳುಮೆ ಮಾಡಲು ಆರಂಭಿಸಿದ್ದಾರೆ. ಅವರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ತಹಶೀಲ್ದಾರ್ ಆರ್.ಎಚ್. ಭಾಗವಾನ್, ತಾಲೂಕು ಆರೋಗ್ಯಾಧಿಕಾರಿ ಡಾ| ಝಡ್.ಆರ್. ಮಕಾನದಾರ್, ಸಿಪಿಐ ಮಂಜುನಾಥ ಪಂಡಿತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.