ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ (ಕೆಪಿಎಂಇ) ತಿದ್ದುಪಡಿ ವಿರೋಧಿಸಿ ಖಾಸಗಿ ವೈದ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರಿಂದ ನಗರದ ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗದ ಸೇವೆ ಅಲಭ್ಯವಾಗಿತ್ತು.
ಇದರ ಪರಿಣಾಮವಾಗಿ ಜ್ವರ, ಕೆಮ್ಮು, ಶೀತ, ತಲೆನೋವು, ದಿಢೀರ್ ಅಸ್ವಸ್ಥಕ್ಕೆ ಖಾಸಗಿ ಆಸ್ಪತ್ರೆಗೆ ಹೋದ ರೋಗಿಗಳು ಪರದಾಡಿದರು. ಕೆಲವೊಂದು ಆಸ್ಪತ್ರೆಗಳಲ್ಲಿ ಹೊರ ರೋಗಿಗಳಿಗೂ ಚಿಕಿತ್ಸೆ ನೀಡಿದ್ದಾರೆ. ನಗರದ ಕೆಂಪೇಗೌಡ ವೈದ್ಯ ವಿಜ್ಞಾನ ಸಂಸ್ಥೆ (ಕಿಮ್ಸ್) ಮೊದಲಾದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗ (ಒಪಿಡಿ)ದ ಸೇವೆ ಸಂಪೂರ್ಣ ಸ್ಥಗಿತಗೊಳಿಸಿದ್ದರು.
ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಆನೇಕಲ್ ಮೂಲದ ಹೇಮಲತಾ ಎಂಬುವರು ಸಾವನ್ನಪ್ಪಿದ್ದರು. ವೈದ್ಯರು ಸೂಕ್ತ ಚಿಕಿತ್ಸೆ ನೀಡದೇ ಹೀಗಾಗಿದೆ ಎಂದು ಮೃತರ ಕುಟುಂಬಸ್ಥರು ಕೆಲಕಾಲ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ಕೊರತೆಯಿಂದ ಸಾವು ಸಂಭವಿಸಿಲ್ಲ.
ಬದಲಾಗಿ ಮೃತರ ಕುಟುಂಬಸ್ಥರು ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೃತರ ದೇಹ ನೀಡಲು ವಿಳಂಬವಾಗಿದೆ ಎಂದು ಆಸ್ಪತ್ರೆ ಮೂಲಗಳು ಖಚಿತ ಪಡಿಸಿದೆ. ಖಾಸಗಿ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಮುಚ್ಚಿದ್ದರಿಂದ ನಗರದ ಕೆ.ಸಿ.ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಮತ್ತು ಲೇಡಿ ಕರ್ಜನ್,
ಜಯನಗರ ಸಾರ್ವಜನಿಕ ಆಸ್ಪತ್ರೆಗಳಲ್ಲಿ ದಾಖಲಾಗುವ ಹೊರರೋಗಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಖಾಸಗಿ ವೈದ್ಯರು ಬೆಳಗಾವಿ ಚಲೋ ಮಾಡುತ್ತಿದ್ದಾರೆ ಎಂಬ ಮಾಹಿತಿ ಇಲ್ಲದೇ ಅನೇಕರು ಖಾಸಗಿ ಆಸ್ಪತ್ರೆಯ ಮೆಟ್ಟಿಲಲ್ಲೇ ಕುಳಿತು ವೈದ್ಯರಿಗಾಗಿ ಕಾದು ವಾಪಾಸ್ ಮನೆ ಸೇರಿದರು.