ಬೆಂಗಳೂರು: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿ ಸಲಾಗಿದೆ.
ಅತಿ ಹಿಂದುಳಿದ ವರ್ಗಗಳನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನೀಡಲು ಪರಿಗಣಿಸಬೇಕು ಎಂದು ನಿವೇದಿಸಿಕೊಳ್ಳಲಾಗಿದೆ.
ಯಾವುದೇ ಕಾರಣಕ್ಕೂ ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಗೆ ಸೇರಿಸಬಾರದು. ಹಾಗೇನಾದರೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದರೆ ರಾಜ್ಯದ ಹಿಂದುಳಿದ ವರ್ಗಗಳಿಗೆ ಅತ್ಯಂತ ಘೋರ ಅನ್ಯಾಯ ಮಾಡಿದಂತಾಗುತ್ತದೆ ಎಂದು ವೇದಿಕೆಯ ಪ್ರಮುಖ ಪದಾಧಿಕಾರಿಗಳು ಸಚಿವ ಈಶ್ವರಪ್ಪನವರ ಬಳಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ತಮ್ಮ ವೇದಿಕೆಯ ಪ್ರಮುಖ ಬೇಡಿಕೆಗಳ ಮನವಿ ಪತ್ರ ನೀಡಿ ಚರ್ಚಿಸಲಾಯಿತು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿರುವ ಸಮಾಜೋ-ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ ಬಹಿರಂಗ ಪಡಿಸಬೇಕು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ-2ಎಗೆ ಸೇರ್ಪಡೆ ಗೊಳಿಸಬಾರದು. ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಯಿಂದ ಪಂಚಮಸಾಲಿ ವಿಷಯ ಹಿಂಪಡೆಯಬೇಕು. ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸುಮಾರು 70 ಜಾತಿ-ಉಪಜಾತಿಗಳನ್ನು ಸೇರ್ಪಡೆಗೆ ಶಿಫಾರಸ್ಸು ಮಾಡಬೇಕು. ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಸಮಾಜದ ಅಲಕ್ಷಿತ ಅತಿ ಹಿಂದುಳಿದ ಸಮುದಾಯಗಳ ಸಾಮಾಜಿಕ ಸುಧಾರಣೆಗೆ ಸರ್ಕಾರ ಬದ್ಧವಾಗಬೇಕು ಎನ್ನುವ ಆಗ್ರಹ ಮಂಡಿಸಿ ಮನವಿ ನೀಡಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಮಾಜಿ ಪರಿಷತ್ ಶಾಸಕ, ಎಂ ಸಿ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ಎಂ ನಾಗರಾಜ್, ಖಜಾಂಚಿ ಎಲ್.ಎ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.