ಮೈಸೂರು: ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ. ಮೋಡ ಬಿತ್ತನೆಯಿಂದ ಯಾವುದೇ ಪ್ರಯೋಜನವಿಲ್ಲ. ಬರ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬರಪೀಡಿತ ಪ್ರದೇಶ ಘೋಷಣೆಯಾದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ. ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲದೇ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತವಿದೆ. ಆದರೆ ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದರು.
ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ? ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ನಮ್ಮ ಸರ್ಕಾರ ಯಶಸ್ವಿಯಾಗಿ ನೂರು ದಿನ ಪೂರೈಸಿದೆ. ಇದುವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಈ ರೀತಿ ಆಗಿರಲಿಲ್ಲ ಎಂದು ಸಿಎಂ ಟೀಕಿಸಿದರು.
ಗೃಹಲಕ್ಷ್ಮಿಯಿಂದ ಸರ್ಕಾರಕ್ಕೆ ಆದಾಯ: ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ 30ರಂದು ಅನುಷ್ಠಾನ ಗೊಳ್ಳಲಿದೆ. ರಾಜ್ಯದಾದ್ಯಂತ 1.30 ಕೋಟಿ ಕುಟುಂಬದ ಯಜಮಾನ್ತಿಯರು ಇದರ ಫಲಾನುಭವಿಗಳು. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನಾಲ್ಕು ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ಮಾಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮಹಿಳೆಯರು ಈ ಹಣವನ್ನು ವಿವಿಧ ಉದ್ದೇಶಗಳಿಗೆ ಬಳಕೆ ಮಾಡುವುದರಿಂದ ಸರ್ಕಾರಕ್ಕೂ ಆದಾಯ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.