ಬೆಂಗಳೂರು: ರಾಜ್ಯದಲ್ಲಿ ಜನತೆ ಈಗಾಗಲೇ ಕೋವಿಡ್19 ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿದ್ದು, ಈಗ ವಿದ್ಯುತ್ ದರ ಏರಿಕೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಕೋವಿಡ್ 19 ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಕೋವಿಡ್ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಅವರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ:ವಿದ್ಯುದಾಘಾತ! ಯೂನಿಟ್ ಸರಾಸರಿ ದರ 40 ಪೈಸೆ ಏರಿಕೆ
ಪ್ರತಿ ಯೂನಿಟ್ ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.