Advertisement

Politics; ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದು ಡೌಟ್…: ಯೋಗೇಶ್ವರ್ ಬಾಂಬ್

12:25 PM Oct 02, 2023 | Team Udayavani |

ರಾಮನಗರ: ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದೆ. ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಹಾಕಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಕಾಂಗ್ರೆಸ್ ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ‌. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲಾಗುತ್ತಿಲ್ಲ ಎಂದರು.

ಸರ್ಕಾರ ಐದು ಗ್ಯಾರಂಟಿ ಕೊಟ್ಟಿದೆ ಹಾಗಾಗಿ ಅನುದಾನ ಕೊಡಲ್ಲವೆಂದು ಹೇಳಿದ್ದಾರೆ‌. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ. ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ‌. ಅವರಿಗೆ ರಾಜಕೀಯ ಭವಿಷ್ಯದ ಆತಂಕವಿದೆ. ಹಾಗಾಗಿ ಇದರ ಪರಿಣಾಮವನ್ನು ಸಂಕ್ರಾಂತಿ ವೇಳೆಗೆ ಎಲ್ಲರೂ ನೋಡುತ್ತೀರಿ ಎಂದರು.

ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ. ಡಿಕೆ ಶಿವಕುಮಾರ್ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ. ಸದ್ಯ ನನಗಿರುವ ಮಾಹಿತಿ ಪ್ರಕಾರ ಹೇಳಿದ್ದೇನೆ. ಖಾಸಗಿಯಾಗಿ ಸಿಕ್ಕಾಗ ಕೆಲವರು ನೋವನ್ನ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರೆ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಸಿ.ಪಿ.ಯೋಗೇಶ್ವರ್ ರಾಜಕೀಯ ಭವಿಷ್ಯ ನುಡಿದರು.

ಮೈತ್ರಿ ಅನಿವಾರ್ಯ: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಪಿ.ಯೋಗೇಶ್ವರ್,  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲು ಮೈತ್ರಿ ಅನಿವಾರ್ಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಮನಕಾರಿ ಆಡಳಿತ ಮಾಡುತ್ತಿದೆ. ಡಿಕೆ ಶಿವಕುಮಾರ್ ಆಪರೇಷನ್ ಹಸ್ತ ಎಂದು ಪ್ರಾರಂಭ ಮಾಡಿದ್ದಾರೆ. ಹಾಗಾಗಿ ಅವರನ್ನ ಎದುರಿಸಲು ಹೊಂದಾಣಿಕೆ ಆಗಿದೆ. ಇದರಿಂದ ಬಿಜೆಪಿ-ಜೆಡಿಎಸ್ ಎರಡೂ ಪಕ್ಷಕ್ಕೂ ಅನುಕೂಲವಾಗಲಿದೆ ಎಂದರು.

Advertisement

ಮೈತ್ರಿ ಬಗ್ಗೆ ನಿನ್ನೆ ಜೆಡಿಎಸ್ ಸರ್ವಾನುಮತದ ಒಪ್ಪಿಗೆ ಪಡೆದಿದೆ. ಮುಂದಿನವಾರ ಚನ್ನಪಟ್ಟಣ ಬಿಜೆಪಿ ಸ್ಥಳೀಯ ನಾಯಕರ ಸಭೆ ನಡೆಸುತ್ತೇವೆ. ಮೈತ್ರಿ ಬಗ್ಗೆ ಬೂತ್ ಮಟ್ಟದ ನಾಯಕರು, ಕಾರ್ಯಕರ್ತರಿಗೆ ಮನವರಿಕೆ ಮಾಡುತ್ತೇವೆ. ಬಳಿಕ ಜೆಡಿಎಸ್ ನಾಯಕರ ಜೊತೆ ಮತ್ತೊಂದು ಸಭೆ ಮಾಡುತ್ತೇವೆ ಎಂದು ಹೇಳಿದರು.

ಟಿಕೆಟ್ ಹಂಚಿಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಬೆಂಗಳೂರು ಗ್ರಾಮಾಂತರ ವಿಚಾರದಲ್ಲಿ ಪಕ್ಷದ ವರಿಷ್ಠರು ಏನೇ ತೀರ್ಮಾನ ಮಾಡಿದ್ದರೂ ಬದ್ಧ. ಬಿಜೆಪಿಗೆ ಅವಕಾಶ ಸಿಕ್ಕಿದರೆ, ನನ್ನನ್ನು ಚುನಾವಣೆಗೆ ನಿಲ್ಲಲು ಸೂಚಿಸಿದರೆ ನಾನು ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಜೆಡಿಎಸ್ ಗೆ ಅವಕಾಶ ನೀಡಿದರೆ ಅವರಿಗೆ ಸಪೋರ್ಟ್ ಮಾಡುತ್ತೇವೆ. ಮುಂದಿನ ರಾಜಕೀಯ ದೃಷ್ಟಿಯಿಂದ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next