ಸಿಂದಗಿ: ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ತನ್ನದೆಯಾದ ಕೊಡುಗೆ ನೀಡಿದೆ. ಉಪಚುನಾವಣೆ ಮುಂಬರುವ 2023ನೇ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿಯಾಗಿದೆ. ಆದ್ದರಿಂದ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಪುರಸಭೆ ಅಧ್ಯಕ್ಷ ಡಾ| ಶಾಂತವೀರ ಮನಗೂಳಿ ಹೇಳಿದರು.
ಪಟ್ಟಣದ ವಿವಿಧ ಬಡಾವಣೆಯಲ್ಲಿ ಪಾದಯಾತ್ರೆ ಮೂಲಕ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.
ನಮ್ಮ ತಂದೆ ಶಾಸಕ ದಿ| ಎಂ.ಸಿ. ಮನಗೂಳಿ ಅವರ ಮಕ್ಕಳಾದ ನಾವು ಅವರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದೇವೆ. ಅವರು ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಜೀವನವನ್ನೆ ಮುಡುಪಾಗಿಟ್ಟಿದ್ದರು. ಶಾಶ್ವತ ಕುಡಿಯುವ ನೀರಿನ ಯೋಜನೆ, ಒಳಚರಂಡಿ ಯೋಜನೆ ಮುಂತಾದ ಮಹತ್ತರ ಯೋಜನೆಗಳನ್ನು ಪಟ್ಟಣಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಇನ್ನು ಹತ್ತು ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಹೊಂದಿದ್ದರು. ಆ ಯೋಜನೆಗಳನ್ನು ಪೂರ್ಣಗೊಳಿಸಲು ನನ್ನ ಸಹೋದರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಅವರನ್ನು ಬಹುಮತದಿಂಧ ಆಯ್ಕೆ ಮಾಡಿ ಎಂದು ಮನವಿ ಮಾಡಿಕೊಂಡರು.
ಇಂದಿರಾ ಗಾಂಧಿ ಕಾಲದಿಂದಲೂ ಬಡವರ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ತನ್ನದೆಯಾದ ಇತಿಹಾಸ ಹೊಂದಿದೆ. ಇಂತಹ ಪಕ್ಷದಲ್ಲಿ ನಾವು ಕಾರ್ಯಕರ್ತರಾಗಿರುವುದು ಹೆಮ್ಮೆಯ ಸಂಗತಿ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಡವರ ಪಾಲಿಗೆ ಆಶಾಕಿರಣವಾಗಿದೆ. ಆದ್ದರಿಂದ ಕಾರ್ಯಕರ್ತರು ಎದೆಗುಂದದೆ ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿನ ಸರಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಅವರನ್ನು ಬಹುಮತದಿಂದ ಚುನಾಯಿಸಬೇಕು ಎಂದು ಮನವಿ ಮಾಡಿಕೊಂಡರು.
ಬಿಜೆಪಿ ದುರಾಡಳಿತ ಕಂಡಿರುವ ರಾಜ್ಯದ ಜನತೆ ಈಗಾಗಲೇ ಬೇಸತ್ತಿದ್ದಾರೆ. ಸಾರ್ವತ್ರಿಕ ವಿಧಾನಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಈ ದೇಶದ ಭವಿಷ್ಯ ಉಜ್ವಲಗೊಳ್ಳಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಮತದಾರರು ಅರಿತಿದ್ದಾರೆ. ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಹೇಳೀದರು.
ಶ್ರೀಶೈಲ ಬೀರಗೊಂಡ, ಸಿದ್ದು ಮಲ್ಲೇದ, ಪ್ರಕಾಶ ಗುಣಾರಿ, ಹಾಜಿ ತಶ್ಯಾಗೋಳ, ರವಿ ನಾವಿ, ಇಲಿಯಾಸ್ ಬಿರಾದಾರ ಸೇರಿದಂತೆ ಅನೇಕರು ಮತಯಾಚನೆಯಲ್ಲಿ ಭಾಗವಹಿಸಿದ್ದರು.