ದಾವಣಗೆರೆ: ಡಾ|ಸ್ವಾಮಿನಾಥನ್ ಆಯೋಗದ ವರದಿ ಜಾರಿ, ರೈತರ ಸಂಪೂರ್ಣ ಸಾಲ ಮನ್ನಾ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಲು ಅಖೀಲ ಭಾರತ ಕಿಸಾನ್ ಸಭಾ (ಎಐಕೆಎಸ್) ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಗುರುವಾರ ಶ್ರೀ ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ರೈತರ ಬೇಡಿಕೆ ಈಡೇರಿಕೆ ಸಂಬಂಧ ಉಪವಿಭಾಗಾಧಿಕಾರಿ ಕಚೇರಿ ಮೂಲಕ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬುದಕ್ಕೆ ಮಧ್ಯಪ್ರದೇಶದಲ್ಲಿ ರೈತರ ಮೇಲೆ ನಡೆದ ಗೋಲಿಬಾರ್ ಸಾಕ್ಷಿ. ಸಾಲ ಮನ್ನಾ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ನಡೆಸಿದ ಗೋಲಿಬಾರ್‌ಗೆ 6 ಜನ ರೈತರು ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲೂ ರೈತರ ಮೇಲೆ ದೌರ್ಜನ್ಯ ನಡೆದಿದೆ.
ದೇಶಕ್ಕೆ ಅನ್ನ ನೀಡುವ ರೈತರು ಬೆಳೆಗಳಿಗೆ ವೈಜ್ಞಾನಿಕ ಬೆಲೆಗೆ ಒತ್ತಾಯಿಸಿ ಹೋರಾಟ ಮಾಡಿದಾಗ ಪೊಲೀಸರ ದೌರ್ಜನ್ಯಕ್ಕೆ ತುತ್ತಾಗಬೇಕಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಕೂಡಲೇ ಡಾ| ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸುವ ಮೂಲಕ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಒಳಗೊಂಡಂತೆ ದೇಶದ ಬಹುತೇಕ ರಾಜ್ಯದ ರೈತರು ಭೀಕರ ಬರಗಾಲಕ್ಕೆ ತುತ್ತಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಪೂರ್ಣ ಸಾಲ ಮನ್ನಾ ಮೂಲಕ ರೈತರಿಗೆ ನೆರವಿಗೆ ದಾವಿಸಬೇಕಿದೆ. ಆದರೆ, ರಾಜ್ಯ ಸರ್ಕಾರ ಮೊದಲು ಕೇಂದ್ರ ಸರ್ಕಾರದ ಸಾಲ ಮನ್ನಾ ಮಾಡಲಿ ಎಂಬುದಾಗಿ ಹೇಳುತ್ತಿದೆ.
ಎರಡು ಸರ್ಕಾರಗಳ ನಡುವಿನ ತಿಕ್ಕಾಟದಿಂದ ರೈತರು ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಪ್ರತಿಭಟನಾಕಾರು ಅಸಮಾಧಾನ ವ್ಯಕ್ತಪಡಿಸಿದರು. ಸತತ ಬರದಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಉಚಿತವಾಗಿ ಒದಗಿಸುವಂತಾಗಬೇಕು. ಕೃಷಿ ಚಟುವಟಿಕೆಯಲ್ಲಿ ಸಂಪೂರ್ಣ ತೊಡಗಿಸಿಕೊಂಡ ಕೋಟ್ಯಂತರ ರೈತರು ವಯಸ್ಸಾದ ನಂತರ ಇನ್ನಿಲ್ಲದ ಸಮಸ್ಯೆಗೆ ತುತ್ತಾಗಬೇಕಾಗುತ್ತದೆ.
ಹಾಗಾಗಿ 60 ವರ್ಷ ಮೇಲ್ಪಟ್ಟ ರೈತ ಹಾಗೂ ರೈತ ಮಹಿಳೆಯರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು. ಖಾತರಿ ಯೋಜನೆಯಡಿ ವರ್ಷವಿಡೀ ಕೆಲಸ ನೀಡಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆ ರಾಜ್ಯ ಉಪಾಧ್ಯಕ್ಷ ಹೊಸಳ್ಳಿ ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಪಾಲವನಹಳ್ಳಿ ಪ್ರಸನ್ನಕುಮಾರ್, ಜಿಲ್ಲಾ ಅಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ್, ಪಿ. ಷಣ್ಮುಖಸ್ವಾಮಿ, ಐರಣಿ ಚಂದ್ರು, ಆವರಗೆರೆ ವಾಸು, ಸೈಯದ್ ಖಾಜಾಪೀರ್, ಗುಡಿಹಳ್ಳಿ ಹಾಲೇಶ್, ಹಾಲೇಶ್ ನಾಯ್ಕ, ಎಚ್.ಎಂ. ಸಂತೋಷ್, ಮಲ್ಲೇಶ್ ನಾಯ್ಕ ಇತರರು ಇದ್ದರು.