Advertisement

26 ಕ್ಷೇತ್ರಗಳ ಕರಡು ಮತದಾರ ಪಟ್ಟಿ ಪ್ರಕಟ 

06:40 AM Nov 11, 2018 | |

ಬೆಂಗಳೂರು: ಇತ್ತೀಚೆಗೆ 3 ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆದ ಜಿಲ್ಲೆಗಳ ವ್ಯಾಪ್ತಿಯ 26 ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಚುನಾವಣಾ ಆಯೋಗ ನ.10ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದೆ.

Advertisement

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ 2019ನೇ ಸಾಲಿನ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗ ಜುಲೈ ತಿಂಗಳಿಂದಲೇ ಆರಂಭಿಸಿದೆ. ಅ.10ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಆಗ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಉಪ ಚುನಾವಣೆ ಘೋಷಣೆಯಾಗಿದ್ದ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರಗಳು ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳು ಸೇರಿ ಉಪ ಚುನಾವಣೆ ನಡೆದ ಆರು ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳನ್ನು ಬಿಟ್ಟು, ಉಳಿದ 198 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಈಗ 26 ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ.

ಈ 26 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿ ಕಚೇರಿ, ಮತದಾರರ
ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ ಹಾಗೂ ಆ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳಲ್ಲಿ ಸಾರ್ವಜನಿಕ ತಿಳಿವಳಿಕೆಗಾಗಿ ಪ್ರಕಟಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಅದರಂತೆ, ನ.10ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ನ.10ರಿಂದ ಡಿ.20ರವರೆಗೆ ಕಾಲಾವಕಾಶವಿದೆ. ಅದೇ ರೀತಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆದುಹಾಕುವ ಸಂಬಂಧ ಸಲ್ಲಿಕೆಯಾದ ಅರ್ಜಿಗಳನ್ನು ಇತ್ಯರ್ಥಪಡಿಸಲು ಡಿ.31 ಕೊನೆ ದಿನವಾಗಿದೆ. 2019ರ ಜ.14ರೊಳಗೆ ಮತದಾರರ ಪಟ್ಟಿ ಮುದ್ರಣ ಕಾರ್ಯ ಮುಗಿಯಲಿದೆ.ಜ.15ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

26 ಕ್ಷೇತ್ರಗಳು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ, ಸಾಗರ, ಬೈಂದೂರು. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ,ವಿಜಯನಗರ, ಹಡಗಲಿ, ಹಗರಿಬೊಮ್ಮನ ಹಳ್ಳಿ, ಕಂಪ್ಲಿ, ಸಂಡೂರು, ಕೂಡ್ಲಗಿ. ಮಂಡ್ಯ ಲೋಕಸಭಾ ಕ್ಷೇತ್ರದ ಮಂಡ್ಯ, ಮದ್ದೂರು, ಮಳವಳ್ಳಿ, ಮೇಲುಕೋಟೆ,ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್‌. ಪೇಟೆ,ಕೃಷ್ಣರಾಜನಗರ. ಅದೇ ರೀತಿ ರಾಮನಗರ, ಜಮಖಂಡಿ.

Advertisement
Advertisement

Udayavani is now on Telegram. Click here to join our channel and stay updated with the latest news.

Next