ಯಾದಗಿರಿ: ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯ ಶಹಾಪುರ ತಾಲೂಕು ಜೋಳದಡಗಿ ಗ್ರಾಮದಲ್ಲಿ ರಸ್ತೆ ಮೇಲೆ ಚರಂಡಿ ನೀರು ಹರಿದಾಡುತ್ತಿದ್ದು, ಗ್ರಾಮಸ್ಥರು ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.
ಗ್ರಾಮದ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗಾತ್ರದ ತಗ್ಗು-ಗುಂಡಿಗಳು ಬಿದ್ದಿವೆ. ಹೊಂಡಗಳಲ್ಲಿ ಕೊಳಚೆ ನೀರು ತುಂಬಿ ಚರಂಡಿಯಾಗಿ ಪರಿಣಮಿಸಿದೆ. ಇದರಿಂದ ನಾಗರಿಕರಿಗೆ ಮತ್ತು ವಾಹನ ಸವಾರರಿಗೆ ಅಡ್ಡಿಯುಂಟಾಗಿ ನಿತ್ಯವೂ ಈ ರಸ್ತೆ ಮುಖಾಂತರ ಸಂಚರಿಸಲು ಪರದಾಡುವಂತಾಗಿದೆ. ಕೂಡಲೇ ಸಂಬಂಧಪಟ್ಟವರು ರಸ್ತೆ ದುರಸ್ಥಿಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಕಲುಷಿತ ನೀರು ಕಚ್ಚಾ ರಸ್ತೆ ಮೇಲೆ ಹರಿದಾಡಿ ಇಡೀ ಗ್ರಾಮ ಗಬ್ಬೆದ್ದು ನಾರುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತಿದೆ. ಮಳೆಗಾಲದಲ್ಲಿ ಇನ್ನಷ್ಟು ಪರಿಸ್ಥಿತಿ ಬಿಗಾಯಿಡಸಲಿದ್ದು, ಡೆಂಘೀ, ಮಲೇರಿಯಾ, ಚಿಕೂನ್ ಗುನ್ಯಾ ಸೇರಿದಂತೆ
ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಂಬಂಧಪಟ್ಟವರು ಕೂಡಲೇ ಚರಂಡಿ ವ್ಯವಸ್ಥೆ ಕಲ್ಪಿಸಿ ಸ್ವತ್ಛತೆ ಕಾಪಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮದ ಅಭಿವೃದ್ಧಿ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಗ್ರಾಮದ ಸಮಸ್ಯೆಗಳ ಬಗ್ಗೆ ತಾಪಂ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜೋಳದಡಗಿ ಗ್ರಾಮಕ್ಕೆ ಭೇಟಿ ನೀಡಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಗ್ರಾಮದಲ್ಲಿ ರಸ್ತೆ ದುರಸ್ತಿ ಮಾಡಿ ಫಾಗಿಂಗ್, ಬ್ಲಿಚಿಂಗ್ ಪೌಡರ್ ಸಿಂಪಡಿಸಿ ಮುಂದೆ ಮಲೇರಿಯಾ, ಡೆಂಘೀ ಜ್ವರ ಸೇರಿದಂತೆ ಮಾರಕ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿಷ್ಕಾಳಜಿ ವಹಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯ ಹೆದ್ದಾರಿ ರಸ್ತೆ ತಡೆ ಹಾಗೂ ಉಗ್ರ ಪ್ರತಿಭಟನೆ ಮಾಡಲಾಗುವುದು ಅವರು ಗ್ರಾಮಸ್ಥರು ಎಚ್ಚರಿಸಿದ್ದಾರೆ.