ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೇವಲ 13 ಗ್ರಾಮಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆಯಿದ್ದು, ಆ ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಭವನದ ತಮ್ಮ ಕಚೇರಿಯಲ್ಲಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ತಾಪಂ ಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಸಮಸ್ಯೆ ಉದ್ಭವಿಸಿದರೆ ತಕ್ಷಣ ಕ್ರಮ: ಸಭೆ ಬಳಿಕ ಉದಯವಾಣಿಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ನಾವು ಟ್ಯಾಂಕರ್ ಮೂಲಕ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ. 13 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುವುದನ್ನು ಗಮನಿಸಿ ಆ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದರು.
ಮಳೆ ಬಾರದೇ ಹೋದರೆ ಕುಡಿಯುವ ನೀರಿನ ಸಮಸ್ಯೆ ಎಲ್ಲಿಯೇ ಉದ್ಭವವಾದರೂ ತುರ್ತಾಗಿ ಗ್ರಾಮಗಳಿಗೆ ನೀರು ಪೂರೈಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಟಾಸ್ಕ್ಫೋರ್ಸ್ ಮೂಲಕ ಪ್ರಕ್ರಿಯೆ: ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳನ್ನು ಮೊದಲೇ ಗುರುತಿಸಿ ಅಂತಹ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಒಂದು ವೇಳೆ ಖಾಸಗಿ ಕೊಳವೆ ಬಾವಿಗಳು ಬತ್ತಿ ಹೋಗಿದ್ದರೂ ಸರ್ಕಾರದಿಂದ ಹೊಸ ಕೊಳವೆಬಾವಿ ಕೊರೆಸಲು ಪಾಯಿಂಟ್ ಗುರುತಿ ಆ ಮೂಲಕ ಹಳೆ ಪೈಪ್‌ಲೈನ್ ಇದ್ದರೆ ಅದರ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆಯನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಎಲ್ಲಾ ಪ್ರಕ್ರಿಯೆಗಳನ್ನು ಟಾಸ್ಕ್ಫೋರ್ಸ್ ಮೂಲಕ ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದಲ್ಲಿ ಯಾವುದೇ ರೀತಿ ಅನುದಾನದ ಕೊರತೆ ಇಲ್ಲ. ಸಮಸ್ಯೆ ಇರುವ ಗ್ರಾಮಗಳಿಗೆ ಮಾತ್ರ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದೇವೆ. ಸದ್ಯಕ್ಕೆ ಯಾವುದೇ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿಲ್ಲ.
●ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ