ಕಾಪು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಪ್ರಯುಕ್ತ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಪುರಸಭೆ ಹಾಗೂ ಎಲ್ಲಾ ಗ್ರಾಮ ಪಂಚಾಯತ್‌ಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ ಆರ್.ಮೆಂಡನ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದಶನದಲ್ಲಿ ದೇಶದಾದ್ಯಂತ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು ಕಾಪು ಕ್ಷೇತ್ರದ 7 ಕಡೆಗಳಲ್ಲಿ ಸ್ವಚ್ಛತಾ ಅಭಿಯಾನ ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುಮಾರು 3000ಕ್ಕೂ ಅಧಿಕ ಮಂದಿ ಸ್ವಯಂ ಸೇವಕರಾಗಿ ಕೈಜೋಡಿಸುತ್ತಿದ್ದು ಈ ವಿಶೇಷ ಅಭಿಯಾನಕ್ಕೆ ಸ್ಥಳೀಯಾಡಳಿತ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸಂಘ ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳು ಮತ್ತು ಅಽಕಾರಿಗಳು ಕೂಡಾ ಪೂರ್ಣ ರೀತಿಯ ಸಹಕಾರ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಮಾತನಾಡಿ, ಸ್ವಚ್ಚತೆ ನಮ್ಮ ದಿನ ನಿತ್ಯದ ಕಾರ್ಯಕ್ರಮವಾಗಬೇಕು. ನಮ್ಮ ಪರಿಸರವನ್ನು ನಾವೇ ಶುಚಿಯಾಗಿ ಇರಿಸುವ ಮೂಲಕ ಸ್ವಚ್ಛ ಭಾರತ್ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಸಾಧ್ಯವಿದೆ ಎಂದರು.
ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ತಾಲೂಕು ಆರೋಗ್ಯ ನೋಡಲ್ ಅಧಿಕಾರಿ ಡಾ| ವಾಸುದೇವ ಆಚಾರ್ಯ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಬ್ರಾಯ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಸ್ಥಳೀಯಾಡಳಿತ ಸಂಸ್ಥೆಗಳ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು ಮತ್ತು ಸದಸ್ಯರು, ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬಂದಿಗಳು, ಆಶಾ ಕಾರ್ಯಕರ್ತೆಯರು ವಿವಿಧೆಡೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಸ್ವಾಗತಿಸಿದರು. ದಂಡತೀರ್ಥ ವಿದ್ಯಾಸಂಸ್ಥೆಯ ಉಪನ್ಯಾಸಕ ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು.