ಬೆಂಗಳೂರು: ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಹಾಗೂ ಕುಡಿಯುವ ನೀರು ಪೂರೈಕೆ ವಿಚಾರವಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಜತೆ ಗುರುವಾರ ಚರ್ಚಿಸಿದರು.
ಜೆಪಿ ನಗರ ನಿವಾಸಕ್ಕೆ ಆಗಮಿಸಿದ್ದ ಡಿ.ಕೆ.ಶಿವಕುಮಾರ್ ಜತೆ ಈ ಕುರಿತು ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ, ರಾಜ್ಯದ ಕೆಲವೆಡೆ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳ ಬಂದಿದೆ. ಹೀಗಾಗಿ,
ಜಲಾಶಯಗಳಲ್ಲಿನ ನೀರಿನ ಲಭ್ಯತೆ, ಕುಡಿಯುವ ನೀರು ಪೂರೈಕೆಗೆ ಅಗತ್ಯವಿರುವ ಪ್ರಮಾಣದ ಬಗ್ಗೆ ಮಾಹಿತಿ ಪಡೆದರು. ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗುತ್ತಿರುವ ಪ್ರದೇಶಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಳೆ ಎದುರಿಸಲು ಕೈಗೊಂಡಿರುವ ಸಿದ್ಧತೆ, ವೈಟ್ ಟಾಪಿಂಗ್ ಕಾಮಗಾರಿ ಕುರಿತು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಜತೆ ಮುಖ್ಯಮಂತ್ರಿ ಚರ್ಚಿಸಿದರು.
ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿರುವುದರಿಂದ ಕೆಲವೆಡೆ ಸಂಚಾರ ದಟ್ಟಣೆ ಉಂಟಾಗಿದ್ದು ಆ ಬಗ್ಗೆ ಗಮನಹರಿಸಿ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಪರಮೇಶ್ವರ್ ಅವರಿಗೆ ತಿಳಿಸಿದರು. ನಂತರ ಮುಖ್ಯಮಂತ್ರಿಯವರು ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರೊಂದಿಗೆ ಚರ್ಚಿಸಿ ರಾಜ್ಯದಲ್ಲಿ ಬರ ಪರಿಸ್ಥಿತಿ, ಪರಿಹಾರ ಕಾಮಗಾರಿ, ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳ ಅನುಷ್ಠಾನ ಕುರಿತು ಮಾಹಿತಿ ಪಡೆದರು.