ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜ್ಯದಲ್ಲಿ ಆವರಿಸಿರುವ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಕಂದಾಯ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್,ಕೃಷಿ, ತೋಟಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಇಡೀ ದಿನ ಪ್ರಗತಿ ಪರಿಶೀಲನೆ ನಡೆಸಿರುವ ಮುಖ್ಯಮಂತ್ರಿಯವರು ಕುಡಿಯುವ ನೀರು ಹಾಗೂ ಮೇವು ಪೂರೈಕೆ, ಬೆಳೆ ಪರಿಹಾರ ವಿತರಣೆ ಕುರಿತು ಮಾಹಿತಿ ಪಡೆಯಲಿದ್ದಾರೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರದಡಿ ಎಷ್ಟು ರೈತರ ಬ್ಯಾಂಕ್ ಖಾತೆಗೆ ಜಮೆ ಆಗಿದೆ ಎಂಬುದರ ಜಿಲ್ಲಾವಾರು ಸಮಗ್ರ ಮಾಹಿತಿ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪ್ರಮುಖವಾಗಿ ರಾಜ್ಯದ 139 ತಾಲೂಕುಗಳಲ್ಲಿ ಬರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಬರ ಪರಿಹಾರ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಮೊತ್ತದ ವೆಚ್ಚ ಹಾಗೂ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ 1235.52 ಕೋಟಿ ರೂ. ಹಣ ರೈತರ ಖಾತೆಗೆ ಜಮೆಆಗಿದೆಯೇ? ಬರ ಪರಿಹಾರ ಕಾಮಗಾರಿ ಸಮರ್ಪಕವಾಗಿ ನಡೆದಿದೆಯೇ ಎಂಬುದರ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಇತ್ತೀಚೆಗೆ ನಡೆದ ಬರ ಕುರಿತು ಸಂಪುಟ ಉಪ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕುಡಿಯುವ ನೀರು ಪೂರೈಕೆಗಾಗಿಯೇ ಪ್ರತ್ಯೇಕವಾಗಿ 100 ಕೋಟಿ ರೂ. ಹಾಗೂ ಬರಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ ತಲಾ 50 ಲಕ್ಷ ರೂ. ಬಿಡುಗಡೆಗೊಳಿಸಿ ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗಿದೆ. ಆ ಹಣ ಬಳಕೆ ಬಗ್ಗೆಯೂ ಮಾಹಿತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.