ಮೈಸೂರು: ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರದ ರಾಂಪುರ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರವನ್ನು ಆರಂಭಿಸಿದರು.
ರಾಂಪುರ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತ ಯಾಚಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ 5 ವರ್ಷದಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ನಾನು ಸಹ ಕಳೆದ ಒಂದೂವರೆ ವರ್ಷಗಳಿಂದ ಕ್ಷೇತ್ರದಲ್ಲಿ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲು ಸಹಕರಿಸಿದ್ದೇನೆ ಹಾಗೂ ಜನರ ಕಷ್ಟಸುಖಗಳಿಗೆ ಸ್ಪಂದಿಸುತ್ತಾ ಬಂದಿದ್ದೇನೆ.
ಕಾಂಗ್ರೆಸ್ ಸರ್ಕಾರ 5 ವರ್ಷದಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ, ಮೈತ್ರಿ, ಮನಸ್ವಿನಿ, ಶೂಭಾಗ್ಯ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ರೈತರ ಸಾಲಮನ್ನಾ, ಉಚಿತ ಬಸ್‌ಪಾಸ್ ವಿತರಣೆ, ಕೆರೆ ತುಂಬಿಸುವ ಯೋಜನೆ ಹೀಗೆ ನೂರಾರು ಕಾರ್ಯಕ್ರಮಗಳನ್ನು ರಾಜ್ಯದ ಜನರಿಗೆ ನೀಡಿದೆ. ಆದ್ದರಿಂದ ಅಭಿವೃದ್ಧಿಯ ಆಧಾರದ ಮೇಲೆ ಮತ ಯಾಚಿಸಲು ಬಂದಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನನ್ನು ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಗ್ರಾಮದ ಲಿಂಗಾಯಿತ ಮುಖಂಡರಾದ ಪಟೇಲ್ ಮಹಾದೇವಪ್ಪ ಮಾತನಾಡಿ, ಸಿದ್ದರಾಮಯ್ಯ ಮತ್ತು ಮಹದೇವಪ್ಪ ಅವರು ಈ ಕ್ಷೇತ್ರದಿಂದ ಗೆದ್ದಿದ್ದಾರೆ. ನಿಮ್ಮನ್ನು ಹೆಚ್ಚು ಅಂತರದಿಂದ ಗೆಲ್ಲಿಸುತ್ತೇವೆ ಎಂದು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಯತೀಂದ್ರ, ಬೇರೆ ಪಕ್ಷದ ಅಭ್ಯರ್ಥಿಗಳು ಯಾರಾದರೂ ನಿಲ್ಲಲಿ. ಅವರ ಬಗ್ಗೆ ತಾನು ಯೋಚನೆಯನ್ನೇ ಮಾಡಿಲ್ಲ.
ಜನರ ಆಶೀರ್ವಾದ ಕಾಂಗ್ರೆಸ್ ಪಕ್ಷದ ಮೇಲಿದೆ ನಾನು ಗೆಲ್ಲುವುದು ಖಚಿತ. ತಂದೆಯವರು ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಾಂಪುರದಿಂದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುತ್ತಿದ್ದರು. ನಾನೂ ಅದೇ ಪರಂಪರೆ ಮುಂದುವರಿಸುತ್ತಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಜಿಪಂ ಮಾಜಿ ಅಧ್ಯಕ್ಷ ಧರ್ಮೇಂದ್ರ ರಾಜು, ತಾಲೂಕು ಪಂಚಾಯ್ತಿ ಉಪಾಧ್ಯಕ್ಷ ಗೋವಿಂದರಾಜು, ಕೆಪಿಸಿಸಿ ಕಾರ್ಯದರ್ಶಿ ಗುರುಪಾದಸ್ವಾಮಿ, ಗ್ರಾಪಂ ಅಧ್ಯಕ್ಷ ಮರಳೂರು ಮಹೇಶ್, ಮುಖಂಡರಾದ ಮಾಲೇಗೌಡ, ಜೀಮಾರಳ್ಳಿ ಗುರುಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಚಾಮರಾಜು, ಹಳ್ಳಿಕೆರೆಹುಂಡಿ ಶಿವಕುಮಾರ್, ಹೊಸಕೋಟೆ ಕುಮಾರ, ಲಾರಿಸ್ವಾಮಿ, ಶಾಂತರಾಜು, ಪ್ರಗತಿ ಸಂಸ್ಥೆಯ ಶರಣಪ್ಪ, ಅರ್ಕೇಶ್ ಇತರರಿದ್ದರು.