ಮೈಸೂರು:ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡಹಬ್ಬ ದಸರಾ ಮಹೋತ್ಸವ-2022ರ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ, ದಸರಾ ಕಾರ್ಯಕ್ರಮಗಳ ಆಯೋಜನೆ ಸಂಬಂಧ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ಹೊರರಾಜ್ಯಗಳಿಂದ ಆಗಮಿಸುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹೆಸರನ್ನು ಸೇರ್ಪಡೆ ಮಾಡುವಂತೆ ಸೂಚಿಸಿದರು.
ಮೈಸೂರಿಗೆ ಆಗಮಿಸುವ ಪ್ರವಾಸಿಗರು ಕೆಆರ್ ಎಸ್, ಶ್ರೀರಂಗಪಟ್ಟಣ ಸೇರಿದಂತೆ ಮಂಡ್ಯ ಜಿಲ್ಲೆಯ ನಾನಾ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ತೆರಳುವ ಸಂದರ್ಭದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. ಹೀಗಾಗಿ ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವಾಗ ಮಂಡ್ಯ ಜಿಲ್ಲೆಯ ಹೆಸರು ಕೂಡ ಸೇರ್ಪಡೆ ಮಾಡಬೇಕು ಎಂದರು.
ಇದೇ ಮೊದಲ ಬಾರಿಗೆ ಆರೋಗ್ಯ ಮತ್ತು ಕೈಗಾರಿಕಾ ದಸರಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆರೋಗ್ಯ ಮೇಳ ಹಾಗೂ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ವಸ್ತುಪ್ರದರ್ಶನ ಆಯೋಜಿಸಲು ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ನಾಲ್ಕು ದಿನ ಕೈಗಾರಿಕಾ ದಸರಾ ಆಚರಣೆಗೆ ಕೈಗಾರಿಕಾ ಸಂಘದವರು ಮನವಿ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ದಸರಾ ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ ವೀಕ್ಷಣೆ ಮಾಡುವ ಸಂಬಂಧ ಏಕೀಕೃತ ಟಿಕೆಟ್ ನೀಡುವ ಬಗ್ಗೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದರು.
ಸಭೆಯಲ್ಲಿ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಪೊಲೀಸ್ ಆಯುಕ್ತರಾದ ಚಂದ್ರಗುಪ್ತ, ಜಿಪಂ ಸಿಇಒ ಪೂರ್ಣಿಮಾ, ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.