ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸ್ವಯಂ ಘೋಷಿತ ಬುದ್ಧಿಜೀವಿಗಳು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಸೋಮವಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಾಸಕ ರವಿ ಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್, ಅಶ್ವತ್ಥ ನಾರಾಯಣ, ರಾಜ್ಯ ಸಂಘಟನ ಕಾರ್ಯದರ್ಶಿ ಅರುಣ್ ಕುಮಾರ್ ಜತೆ ವಿವಾದದ ಬಗೆಗಿನ ಚರ್ಚೆಯಲ್ಲಿ ಅವರು ಪಾಲ್ಗೊಂಡರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತ್ಯ ವಿಷಯವನ್ನು ಮರೆ ಮಾಚುವ ಕೆಲಸ ಆಗುತ್ತಿದೆ. ಶಿಕ್ಷಣ ಸಚಿವರು ಸಭೆಯಲ್ಲಿ ಸಂಪೂರ್ಣ ಮಾಹಿತಿ ಕೊಟ್ಟಿ¨ªಾರೆ. ಕುವೆಂಪುಗೆ ಯಾವುದೇ ಅಪಮಾನ ಮಾಡಿಲ್ಲ. ಈ ಬಗ್ಗೆ ಕೆಲವರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಹಿಂದಿನ ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರಾದ ಬರಗೂರು ರಾಮಚಂದ್ರಪ್ಪ ಸಮಿತಿ ಸೇರಿಸಿದ್ದಕ್ಕಿಂತ ಹೆಚ್ಚು ಪಠ್ಯ ಈಗ ಸೇರ್ಪಡೆ ಮಾಡಲಾಗಿದೆ. ಮೆಕಾಲೆ ಶಿಕ್ಷಣ ಸಂಸ್ಕೃತಿ ನಮ್ಮಿಂದ ದೂರ ಆಗಬೇಕು. ರಾಷ್ಟ್ರ, ಸಂಸ್ಕೃತಿ, ಸಂಸ್ಕಾರಕ್ಕೆ ಆದ್ಯತೆ ಕೊಡುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.
ಶ್ರೀಗಳಿಗೆ ಮನವರಿಕೆ
ನಾಡಗೀತೆಗೆ ಅವಮಾನ ಮಾಡಿದವರ ಮೇಲೆ ಕ್ರಮಕ್ಕೆ ಆದಿಚುಂಚನಗಿರಿ ಶ್ರೀಗಳು ಆಗ್ರಹಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಮತ್ತು ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಶಿಕ್ಷಣ ಸಚಿವರೇ ಶ್ರೀಗಳನ್ನು ಭೇಟಿಯಾಗಿ ಸ್ಪಷ್ಟನೆ ನೀಡಲಿದ್ದಾರೆ ಎಂದರು.