ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಛೀಮಾರಿಗೊಳಗಾಗಿದ್ದ ಡಿಎಂಕೆ ಮುಖಂಡ ಎ.ರಾಜಾ ಅವರಿಗೆ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಲ್ಲಿ ಕೇಂದ್ರ ಚುನಾವಣಾ ಆಯೋಗ ಮುಂದಿನ 48 ಗಂಟೆಗಳ ಕಾಲ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ನಿರ್ಬಂಧ ವಿಧಿಸಿದೆ.
ಇದನ್ನೂ ಓದಿ:ಇನ್ನು ಮುಂದೆ ರಾತ್ರಿ ವೇಳೆ ರೈಲುಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಚಾರ್ಜ್ ಮಾಡುವಂತಿಲ್ಲ…!
ತಮಿಳುನಾಡು ವಿಧಾನಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಡಿಎಂಕೆ ಮುಖಂಡ ಎ.ರಾಜಾ ಅವರು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಹಾಗೂ ಅವರ ತಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದರ ವಿರುದ್ಧ ಆಯೋಗ ಈ ಕ್ರಮ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಅವರ ತಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಡಿಎಂಕೆ ಮುಖಂಡ ಎ.ರಾಜಾ ಅವರಿಗೆ ಚುನಾವಣಾ ಆಯೋಗ ವಿವರಣೆ ಕೇಳಿ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು. ಬುಧವಾರ ಸಂಜೆ 6ಗಂಟೆಯೊಳಗೆ ಉತ್ತರ ನೀಡುವಂತೆ ಆಯೋಗ ಎ.ರಾಜಾಗೆ ಸೂಚಿಸಿತ್ತು.
ಮಾರ್ಚ್ 31ರ ಸಂಜೆ 6ಗಂಟೆಯೊಳಗೆ ತಮ್ಮ ಹೇಳಿಕೆ ಬಗ್ಗೆ ವಿವರಣೆ ನೀಡುವ ಅವಕಾಶವನ್ನು ಎ.ರಾಜಾ ಅವರಿಗೆ ನೀಡಲಾಗಿತ್ತು. ಆದರೆ ಯಾವುದೇ ವಿವರಣೆ ನೀಡದ ಹಿನ್ನೆಲೆಯಲ್ಲಿ ನಿಮ್ಮ ವಿರುದ್ಧ ಈ (48 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧ) ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಆಯೋಗ ತಿಳಿಸಿದೆ.