Advertisement

Economic growth ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ: ಸಿಎಂ

06:01 PM Aug 25, 2023 | Team Udayavani |

ಬೆಂಗಳೂರು: ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಬೆಂಗಳೂರಿನ ಗಾಂಧಿ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಗಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದರು.

Advertisement

”ಬರೀ ಅಂಬಾನಿ – ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ.
ಈ ಕಾರಣಕ್ಕೆ ನಾವು ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ.” ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

”ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು.ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ – ಅದಾನಿಯವರ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ? ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು? ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ? ಎಂದು ಪ್ರಶ್ನಿಸಿದರೆ ಹೇಗೆ?” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಮಾರಂಭದಲ್ಲಿ ಮಾಜಿ ಸಚಿವರಾದ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಇತರರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next