ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ನಂತರದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಬೇಕಾದ ಅಗತ್ಯವಿದೆ.
ವಲಸಿಗರಿಗೆ ಉತ್ತಮ ಅವಕಾಶಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಸರಕಾರ ಗಮನ ಹರಿಸುತ್ತಿದೆ.
ವಿದೇಶಗಳಲ್ಲಿ ಭಾರತೀಯ ಪ್ರತಿಭೆಗಳು ಎದುರಿಸುತ್ತಿರುವ ಕೋವಿಡ್ ಬಿಕ್ಕಟ್ಟಿನ ಋಣಾತ್ಮಕ ಆರ್ಥಿಕ ಪರಿಣಾಮಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ವಲಸಿಗರ ರಕ್ಷಕರ ವಾರ್ಷಿಕ ಸಮ್ಮೇಳನ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು.
ವಲಸಿಗರ ರಕ್ಷಕರು ಕೋವಿಡ್ ನಂತರದ ಜಗತ್ತಿನ ಸವಾಲನ್ನು ಎದುರಿಸಲು ಸನ್ನದ್ಧರಾಗಬೇಕು. ಕೋವಿಡ್ ನಂತರದ ಆರ್ಥಿಕ ಪುನರುಜ್ಜೀವನಕ್ಕೆ ಪಣ ತೊಡಬೇಕು ಎಂದು ಸಲಹೆ ನೀಡಿದರು.
ನಮ್ಮ ಮಾರುಕಟ್ಟೆಯ ಪಾಲನ್ನು ನಾವು ಆದಷ್ಟು ಬೇಗ ಮರಳಿ ಪಡೆಯುವುದು ಅಗತ್ಯವಾಗಿದೆ. ಮುಂಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿ ನಾವು ನಮ್ಮ ಪ್ರಯತ್ನಗಳನ್ನು ಮುಂದುವರಿಸಬೇಕಿದೆ ಎಂದು ಅವರು ಹೇಳಿದರು.