ಬೆಂಗಳೂರು: ಆದಾಯ ತೆರಿಗೆ ದಾಳಿ ವೇಳೆ ದೆಹಲಿಯ ಮನೆಯಲ್ಲಿ ಸಿಕ್ಕ 8.69 ಕೋಟಿ ರೂ. ಬೇನಾಮಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸು ವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಮೇಲ್ಮನವಿ ಸಲ್ಲಿಸಿದ್ದಾರೆ.
ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯ ಪೀಠದ ಮುಂದೆ ಸೋಮವಾರ ಈ ಮೇಲ್ಮನವಿ ಸಲ್ಲಿಸ ಲಾಗಿದೆ. ಕಲಾಪ ವೇಳೆ ಡಿ.ಕೆ. ಶಿವಕುಮಾರ್ ಅವರ ಪರ ವಕೀ ಲರು ನ್ಯಾಯಪೀಠದ ಮುಂದೆ ಹಾಜರಾಗಿ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದರು. ಸೆ.11ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಜಾರಿ ನಿರ್ದೇಶನಾಲ ಯದ ಸಮನ್ಸ್ ರದ್ದು ಕೋರಿ ಡಿ.ಕೆ. ಶಿವಕುಮಾರ್ ಮತ್ತವರ ಆಪ್ತರು ಸಲ್ಲಿಸಿದ್ದ ಅರ್ಜಿಯನ್ನು ಆ.29ರಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಅದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಇಡಿ ಪುನಃ ಸಮನ್ಸ್ ನೀಡಿತ್ತು. ಆ.30ರಂದು ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. ಅದನ್ನೂ ನ್ಯಾಯಪೀಠ ತಳ್ಳಿ ಹಾಕಿತ್ತು. ಇದೀಗ ಮೇಲ್ಮನವಿ ಸಲ್ಲಿಸಲಾಗಿದೆ. ದೆಹಲಿಯಲ್ಲಿ ಜಾಮೀನು ಅರ್ಜಿ ವಿಚಾರಣೆ ಸೆ.13ಕ್ಕೆ ನಡೆಯಲಿದೆ.
ಡಿಕೆಶಿ ಸಂಕಟ ನಿವಾರಣೆಗಾಗಿ ಚಂಡಿಕಾ ಯಾಗ
ಕೊಲ್ಲೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಎಲ್ಲ ಆರೋಪಗಳಿಂದ ಮುಕ್ತರಾಗುವಂತೆ ಪ್ರಾರ್ಥಿಸಿ ಅವರ ಕುಟುಂಬ ವರ್ಗ ಮತ್ತು ಬೆಂಬಲಿಗರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಸೋಮವಾರ ಚಂಡಿಕಾ ಹೋಮ ನೆರವೇರಿಸಿದರು.
ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ಅವರ ಆಪ್ತ ಸಹಾಯಕ ಮಂಜುನಾಥ್ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಚಂಡಿಕಾ ಯಾಗದ ರಶೀದಿ ಮಾಡಿಸಿದ್ದರು. ಸಮೀಪದ ಬಂಧುಗಳಾದ ನಾಗರಾಜ, ಮಂಜು, ಅಶೋಕ, ಮಾಜಿ ಶಾಸಕ ಯು.ಆರ್. ಸಭಾಪತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕೊಡವೂರು ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿಯ ಸದಸ್ಯ ರಮೇಶ ಗಾಣಿಗ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಕುಮಾರ್ ಶೆಟ್ಟಿ ಸೇರಿ ಸ್ಥಳೀಯ ಮುಖಂಡರಿದ್ದರು.