ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಸಮನ್ಸ್ ಜಾರಿ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಗುರುವಾರ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಪ್ರತಿಭಟನೆ ಅಂಗವಾಗಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಭೆ ನಡೆಸಿ ಅನಂತರ ನಿಯೋಗದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.
ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ್, ಎಂ.ಬಿ. ಪಾಟೀಲ್ ಸೇರಿ ಹಲವು ನಾಯಕರು ಭಾಗವಹಿಸಲಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ಸುತ್ತಮುತ್ತಲ ಜಿಲ್ಲೆಗಳ ಕಾರ್ಯಕರ್ತರು ಹಾಗೂ ಮುಖಂಡರು ಬೃಹತ್ ಪ್ರಮಾಣದಲ್ಲಿ ಭಾಗವಹಿಸಲು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ.
ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಸೋನಿಯಾಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವೀರಪ್ಪ ಮೊಯ್ಲಿ, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಆರ್.ಪಾಟೀಲ್, ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಸಲೀಂ ಆಹಮದ್, ಧ್ರುವನಾರಾಯಣ, ಕೆ.ಜೆ.ಜಾರ್ಜ್, ಕೃಷ್ಣ ಬೈರೇಗೌಡ ಸೇರಿ ಪ್ರತಿ ಜಿಲ್ಲೆಗೆ ಒಬ್ಬೊಬ್ಬರಿಗೆ ಉಸ್ತುವಾರಿ ನೀಡಲಾಗಿದೆ.