Advertisement

ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಬುನಾದಿ

10:34 AM Jan 14, 2019 | |

ಮೊಳಕಾಲ್ಮೂರು: ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಶೈಕ್ಷಣಿಕವಾಗಿ ಪ್ರಗತಿ ಹೊಂದಿ ಸಬಲರಾಗಬೇಕು ಎಂದು ನ್ಯಾಯವಾದಿ ಎಂ.ಎನ್‌. ವಿಜಯಲಕ್ಷ್ಮೀ ಕರೆ ನೀಡಿದರು.

Advertisement

ತಾಲೂಕಿನ ಜೆ.ಬಿ. ಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಗ್ರಾಮ ಪಂಚಾಯತ್‌ ಸಹಯೋಗದೊಂದಿಗೆ ಆಯೋಜಿಸಿದ್ದ ಮಹಿಳಾ ಸಬಲೀಕರಣ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿರದೆ ಕಡ್ಡಾಯವಾಗಿ ಶಿಕ್ಷಣ ಪಡೆದು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸಬಲೀಕರಣಗೊಂಡು ಪುರುಷರಂತೆ ಉನ್ನತ ಸ್ಥಾನಮಾನಗಳನ್ನು ಪಡೆಯಬೇಕು. ಪುರುಷರಿಂದ ದೌರ್ಜನ್ಯಕ್ಕೊಳಗಾಗಿ ಬಹುತೇಕ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡು ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಹೆಣ್ಣುಮಕ್ಕಳು ಕಡ್ಡಾಯವಾಗಿ ಉನ್ನತ ಶಿಕ್ಷಣ ಪಡೆದಲ್ಲಿ ದೌರ್ಜನ್ಯ, ತಾರತಮ್ಯವನ್ನು ನಿವಾರಿಸಬಹುದಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಬಹುತೇಕ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿಯುತ್ತಿದ್ದಾರೆ. ಸಮಾನವಾಗಿ ಪ್ರಗತಿ ಹೊಂದಲು ಮುಖ್ಯವಾಗಿ ಶಿಕ್ಷಣ ಪಡೆಯಬೇಕು. ಪುರುಷರು ಕೂಡ ಹೆಣ್ಣುಮಕ್ಕಳೆಂದು ತಾರತಮ್ಯ ಮಾಡದೆ ಮಹಿಳಾ ಸಬಲೀಕರಣಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತ ಬೊಮ್ಮಣ್ಣ ಮಾತನಾಡಿ, ದೇಶದಲ್ಲಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಿದರೆ ಸದೃಢ ಸಮಾಜ ನಿರ್ಮಾಣ ಸಾಧ್ಯ. ಕುಟುಂಬ ನಿರ್ವಹಣೆಯ ನೆಪ ಹೇಳಿಕೊಂಡು ಮಕ್ಕಳನ್ನು ಕೈಗಾರಿಕೆ, ಹೋಟೆಲ್‌, ಪೌಲಿó ಫಾರಂ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಕೆಲಸಕ್ಕೆ ಕಳುಹಿಸುವುದು ಕಾನೂನು ಪ್ರಕಾರ ಅಪರಾಧ. ವಿದ್ಯಾಭ್ಯಾಸ ಮಾಡುವ ವಯಸ್ಸಿನಲ್ಲಿ ಕೆಲಸಕ್ಕೆ ಕಳುಹಿಸಿದರೆ ಅವರ ಭವಿಷ್ಯವನ್ನೇ ಹಾಳು ಮಾಡಿದಂತಾಗುತ್ತದೆ. ಎಷ್ಟೇ ಸಮಸ್ಯೆಗಳಿದ್ದರೂ ಪೋಷಕರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.

Advertisement

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಕುರುಗೋಡಪ್ಪ, ಡಾನ್‌ಬಾಸ್ಕೋ ಶಾಲೆಯ ಆನಂದ, ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮಪ್ಪ, ಉಪಾಧ್ಯಕ್ಷೆ ಕವಿತಮ್ಮ, ಪಿಡಿಒ ಭೀಮಲಿಂಗಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕ ಬಸವರಾಜ್‌, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮುಕ್ಕಣ್ಣ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next