ಕುಂದಾಪುರ: ಶಿಕ್ಷಣ ಇಲಾಖೆಯಡಿ ಅಂದಾಜು 1 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಇಲಾಖೆ ಹೊಣೆ ಹೊತ್ತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಹೆಮ್ಮಾಡಿಯಲ್ಲಿ ಅವರು ಮಾತನಾಡಿ, ಸಿದ್ದರಾಮಯ್ಯನವರೇ, ನಿಮ್ಮದೇ ಸಂಪುಟದ ಸದಸ್ಯರೊಬ್ಬರು ಗಂಭೀರ ಆಪಾದನೆ ಎದುರಿಸುತ್ತಿದ್ದು, ಕೂಡಲೇ ನೀವು ಅವರನ್ನು ಸಂಪುಟದಿಂದ ವಜಾ ಮಾಡಿ, ಘನತೆ ಉಳಿಸಿಕೊಳ್ಳಿ ಎಂದು ಒತ್ತಾಯಿಸಿದರು.
ಬಸವನಗೌಡ ಪಾಟೀಲ್ ಯತ್ನಾಳ ಅವರು ಹಿರಿಯರು. ಅವರನ್ನು ಕರೆಸಿ ಮಾತನಾಡಲು ಕೇಂದ್ರದ ನಾಯಕರು ಶಕ್ತರಿದ್ದಾರೆ. ವರಿಷ್ಠರು ಸಕಾಲದಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದ ಅವರು, ಕುಮಾರ್ ಬಂಗಾರಪ್ಪ ಅವರು ನಮ್ಮ ಆತ್ಮೀಯರು. ಇತ್ತೀಚೆಗಷ್ಟೇ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಸುಳ್ಳು ಸುದ್ದಿ. ಇದನ್ನು ಅವರೇ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಶೀಘ್ರ ಅವರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಲಿದ್ದಾರೆ ಎಂದು ಸ್ಪಷ್ಪಡಿಸಿದರು.
ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಸುಳ್ಳು ಹೇಳಿ ಜನರನ್ನು ಸರಕಾರ ವಂಚಿಸಿದೆ ಎಂದು ಆರೋಪಿಸಿದ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ 11 ಸಾವಿರ ಕೋ. ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಹಿಂದುಳಿದ ವರ್ಗದ ಅಭಿವೃದ್ಧಿಗೆ ಯಾವುದೇ ಯೋಜನೆಗಳಿಲ್ಲ. ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ಕನಿಷ್ಠ 7 ಮೀ. ರಸ್ತೆ ನಿರ್ಮಿಸಿಲ್ಲ. ಶಾಸಕರ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. ಶಾಸಕ ಗುರುರಾಜ ಗಂಟಿಹೊಳೆ ಉಪಸ್ಥಿತರಿದ್ದರು.