ತುಮಕೂರು: ಕೊರೊನಾ ಸಂಕಷ್ಟದ ನಡುವೆಯೂ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದರು.
ಜಿಪಂ ಸಭಾಂಗಣದಲ್ಲಿ ಭಾನುವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ಧತೆ ಕುರಿತಂತೆ ಡಿಡಿಪಿಐ ಮತ್ತು ಬಿಇಒಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕುಡಿಯಲು ಮನೆಯಿಂದಲೇ ಬಿಸಿ ನೀರನ್ನು ತರುವಂತೆ ಸೂಚಿಸಬೇಕು. ಜೊತೆಗೆ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕೇಂದ್ರಗಳಲ್ಲಿ ಶೌಚಾಲಯದ ಸ್ವತ್ಛತೆಯ ಬಗ್ಗೆ ಗಮನಹರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳ ಮನಸ್ಥಿತಿ ಕೆಡದಂತೆ ಎಚ್ಚರವಹಿಸಬೇಕು ಎಂದರು.
ಪರೀಕ್ಷಾ ಕೇಂದ್ರದಿಂದ ಮನೆ ದೂರವಿದ್ದು, ಯಾವುದೇ ಸಂಚಾರ ವ್ಯವಸ್ಥೆ ಇಲ್ಲದಿದ್ದರೆ, ಅಂತಹ ವಿದ್ಯಾರ್ಥಿಗಳ ವಿವರ ಪಡೆದು ಶಾಲೆಯ ಮುಖ್ಯೋಪಾಧ್ಯಾಯರು ರೂಟ್ ಮ್ಯಾಪ್ ಸಿದ್ಧಪಡಿಸಬೇಕು. ಅವರ ಬಳಿ ಇರುವ ಪ್ರವೇಶ ಪತ್ರ, ಉಚಿತ ಬಸ್‌ಪಾಸ್‌ಗಳನ್ನು ಪರಿಗಣಿಸಲು ನಿರ್ಧರಿಸಲಾಗಿದೆ. ಖಾಸಗಿ ಶಾಲೆಯ ಬಸ್ಸುಗಳನ್ನು ಬಳಸಿಕೊಂಡು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಕರೆತರಬೇಕು ಎಂದು ಸೂಚಿಸಲಾಗಿದೆ ಎಂದರು.