ಗಂಗೊಳ್ಳಿ: ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿ ಕೊಡಬೇಕಾದುದು ಸರಕಾರದ ಕರ್ತವ್ಯ. ಶಿಕ್ಷಣ ಕ್ಷೇತ್ರ ಸರಕಾರದ ಮೊದಲ ಆದ್ಯತೆಯಾಗಿದ್ದು, ಕ್ಷೇತ್ರದಲ್ಲಿ ಶಾಲಾ ಕೊಠಡಿ ಕೊರತೆ ಇರುವ ಶಾಲೆಗಳಿಗೆ ಸರಕಾರದ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸಿ ಶಾಲಾ ಕೊಠಡಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.
ಅವರು ಬುಧವಾರ ಗುಜ್ಜಾಡಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಕರ್ನಾಟಕ ಸರಕಾರದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ತರಗತಿ ಕೊಠಡಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್, ತಾ.ಪಂ. ಸದಸ್ಯರಾದ ನಾರಾಯಣ ಕೆ. ಗುಜ್ಜಾಡಿ, ರಾಜು ದೇವಾಡಿಗ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಮೇಸ್ತ, ಗುಜ್ಜಾಡಿ ಗ್ರಾ.ಪಂ. ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಮಾಜಿ ಅಧ್ಯಕ್ಷ ಹರೀಶ ಮೇಸ್ತ, ರಾಜು ಶ್ರೀಯಾನ್, ಶೇಖರ ದೇವಾಡಿಗ, ಗುಜ್ಜಾಡಿ ಗ್ರಾ.ಪಂ. ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶತಮಾನೋತ್ಸವ ಸಮಿತಿ ಪದಾಧಿಕಾರಿಗಳು, ಶಿಕ್ಷಕರು, ಹೆತ್ತವರು ಈ ಸಂದರ್ಭ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಆನಂದ ಜಿ. ಸ್ವಾಗತಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್ ವಂದಿಸಿದರು.
ದುರಸ್ತಿಗೂ ಅನುದಾನ
ಶತಮಾನೋತ್ಸವ ಆಚರಿಸಿಕೊಳ್ಳುತ್ತಿ ರುವ ಗುಜ್ಜಾಡಿ ಸರಕಾರಿ ಹಿ.ಪ್ರಾ. ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ನೂತನ ತರಗತಿ ಕೋಣೆ ನಿರ್ಮಿಸಲು ಅನುದಾನ ಒದಗಿಸಲಾಗಿದ್ದು, ಶಾಲಾ ಕಟ್ಟಡದ ದುರಸ್ತಿಗೂ ಅನುದಾನ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.