ಮಡಿಕೇರಿ:ಶೈಕ್ಷಣಿಕ ಸಾಧನೆ ಯೊಂದಿಗೆ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಚಿಂತಿಸಬೇಕು ಮತ್ತು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಹೇಳಿದ್ದಾರೆ.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆಯು ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಾದಕ ವಸ್ತುಗಳಾದ ಡ್ರಗ್ಸ್, ಹೆರಾಯಿನ್, ಬ್ರೌನ್ ಶುಗರ್ ಮತ್ತಿತರ ದ್ರವ್ಯಗಳ ಚಟಕ್ಕೆ ತುತ್ತಾಗಬಾರದು, ಯುವ ಜನರು ತಮ್ಮ ಜೀವನವನ್ನು ಹಸನು ಮಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ , ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್ ,ಮನೋವೈದ್ಯರಾದ ಡಾ| ಡೇವಿನ್ ಲಿನೇಕರ್ ಕರ್ಕಡ .ಡಿ , ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ಅವರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪ ನಿರೀಕ್ಷಕರಾದ ಕೆ.ಎಸ್.ಸುಂದರ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ| ಕೆ ಮೋಹನ್, ಜಿ.ಪಂ.ಸಹಾಯಕ ಕಾರ್ಯದರ್ಶಿ ಬಾಬು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ| ಎನ್.ಆನಂದ್, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಆರ್.ಸಂಪತ್ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ| ಟಿ.ಡಿ.ತಿಮ್ಮಯ್ಯ, ಉಪಸ್ಥಿತರಿದ್ದರು. ರಾಜಶೇಖರ್ ಅವರು ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಅವರು ನಿರೂಪಿಸಿ, ವಂದಿಸಿದರು.