ಬೆಂಗಳೂರು: ಉನ್ನತ ಶಿಕ್ಷಣ ಪಡೆಯಲು ಬಯಸುವ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಕೇಂದ್ರ ವಲಯದ ಬಡ್ಡಿ ಸಹಾಯಧನ ಯೋಜನೆ -2009 (ಸಿಎಸ್‌ಐಎಸ್) ಇದರ ಸೌಲಭ್ಯಗಳನ್ನು ಸದ್ಯದ ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ವಿಸ್ತರಿಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಡಾ| ರಾಮ ಮನೋಹರ್ ಲೋಹಿಯ ಚಿಂತಕರ ವೇದಿಕೆ ಅಧ್ಯಕ್ಷ ಬಿ.ಎಸ್. ಶಿವಣ್ಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್, ನ್ಯಾ| ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ನೋಟಿಸ್ ಜಾರಿಗೆ ಆದೇಶಿಸಿತು.
ಕೇಂದ್ರದ ಸಿಎಸ್‌ಐಎಸ್ ಯೋಜನೆಯಡಿ ವಾರ್ಷಿಕ 4.5 ಲಕ್ಷ ಆದಾಯವಿರುವ ಹೆತ್ತವರ ಮಕ್ಕಳು, ಅಥವಾ ನ್ಯಾಕ್, ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುವ ವಿದ್ಯಾರ್ಥಿ ಗಳಿಗೆ ಮಾತ್ರ ಆರ್ಥಿಕ ನೆರವು ಸಿಗುತ್ತದೆ. ಆದರೆ ಸದ್ಯದ ಕೋವಿಡ್-19 ಪರಿಸ್ಥಿತಿಯಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಶೈಕ್ಷಣಕ ಸಾಲ ಮರುಪಾವತಿ ಕಷ್ಟವಾಗಿದೆ. ಆದ್ದರಿಂದ ಸಿಎಸ್‌ಐಎಸ್ ಯೋಜನೆಯ ಸೌಲಭ್ಯಗಳನ್ನು ಶ್ರೇಣಿಕರಣ ಅಥವಾ ತಾರತಮ್ಯವಿಲ್ಲದೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸ ಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು ಸೆ. 4ಕ್ಕೆ ಮುಂದೂಡಿತು.