ಮಡಿಕೇರಿ : ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಯಿತು.
ಅರಣ್ಯ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಅವರು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಿದ್ದು, ಕಾಡಾನೆಗಳು ಮತ್ತು ಮಾನವನ ನಡುವೆ ಒಂದಲ್ಲ ಒಂದು ರೀತಿಯಲ್ಲಿ ಸಂಘರ್ಷ ಏರ್ಪಡುತ್ತಿದೆ. ಇದನ್ನು ತಡೆಯಲು ಅರಣ್ಯ ಇಲಾಖೆಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಮಾನವನ ಜೀವಕ್ಕೆ ಬೆಲೆ ಕಟ್ಟುವುದು ಅಸಾಧ್ಯ. ಆದ್ದರಿಂದ ಕಾಡಾನೆ ಹಾಗೂ ವನ್ಯ ಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಬೇಕಿದೆ. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಜೊತೆ ನಾನಾ ಇಲಾಖೆಗಳು ಕೈಜೋಡಿಸಬೇಕಿದೆ ಎಂದು ಅವರು ಹೇಳಿದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕ ತಮ್ಮಯ್ಯ ಅವರು ಜಾನುವಾರುಗಳಿಗೆ ವಿಮೆ ಮಾಡಿಸಲು ಅವಕಾಶವಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬದವರ ಜಾನುವಾರುಗಳಿಗೆ ಉಚಿತವಾಗಿ ವಿಮೆ ಮಾಡಲಾಗುತ್ತದೆ. ಎಂದು ಅವರು ಮಾಹಿತಿ ನೀಡಿದರು.
ತಿತಿಮತಿ ವ್ಯಾಪ್ತಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ. ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅಬಕಾರಿ ಇಲಾಖೆಯ ಉಪ ಆಯುಕ್ತದ ವೀರಣ್ಣ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಯ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಡಿವೈಎಸ್‌ಪಿ ಸುಂದರರಾಜ್, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಮಹಂತೇಶಪ್ಪ, ತೋಟಗಾರಿಕೆಯ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ನಾನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
40, 000 ಆನೆಗಳು ಏಷ್ಯಾ ಖಂಡದಲ್ಲಿ 40 ಸಾವಿರ ಆನೆಗಳು, ದೇಶದಲ್ಲಿ 27 ಸಾವಿರ ಆನೆಗಳು ಹಾಗೂ ರಾಜ್ಯದಲ್ಲಿ 6 ಸಾವಿರ ಆನೆಗಳಿವೆ. ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿ ಹೆಚ್ಚಿನ ಆನೆಗಳು ಇವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಿಸ್ತರಾಜ ಮಾಹಿತಿ ನೀಡಿದರು. ಸೋಲಾರ್ ಬೇಲಿ , ರೈಲ್ವೆ ಕಂಬಿ ಅಳವಡಿಸುವುದು, ಕಂದಕ ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆನೆಗೆ ಪ್ರತೀ ನಿತ್ಯ 200-250 ಕೆ.ಜಿ. ಆಹಾರ ಬೇಕಾಗುತ್ತದೆ ಎಂದರು. ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ತಮ್ಮಯ್ಯ ಅರಣ್ಯ ಪ್ರದೇಶದಲ್ಲಿ ಯಥೇಚ್ಛವಾಗಿ ಬಿದಿರು, ಹಲಸು ಗಿಡಗಳನ್ನು ಬೆಳೆಸಬೇಕು. ದೊಡ್ಡ ಕೆರೆ, ಕಟ್ಟೆಗಳನ್ನು ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.