ವಿಧಾನಸಭೆ: ಈಜೀಪುರ ಮೇಲ್ಸೇತುವೆ ನಿರ್ಮಾಣಕ್ಕೆ ಅಲ್ಪಾವಧಿ ಟೆಂಡರ್ ಕರೆದು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ರಾಮಲಿಂಗಾರೆಡ್ಡಿ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಈ ಹಿಂದೆ ಈಜೀಪುರ ಜಂಕ್ಷನ್‌ನಿಂದ ಕೇಂದ್ರೀಯ ಸದನದವರೆಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದ ಕಂಪನಿ ಸರಿಯಾಗಿ ಕಾರ್ಯ ನಿರ್ವಹಿಸದ ಕಾರಣ, 1.57 ಕೋಟಿ ರು. ದಂಡ ವಿಧಿಸಿ ಗುತ್ತಿಗೆ ರದ್ದುಗೊಳಿಸಲಾಗಿದೆ.
ಇದೀಗ ಹೊಸ ಟೆಂಡರ್ ಕರೆದು ಬೇರೆ ಕಂಪನಿಗಳ ಮೂಲಕ ಮೇಲ್ಸೇತುವೆ ನಿರ್ಮಿಸಲು ನಿರ್ಧರಿಸಲಾಗಿದ್ದು, ಅಲ್ಪಾವಧಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.
ರಾಮಲಿಂಗಾರೆಡ್ಡಿ ಮಾತನಾಡಿ, ಮೇಲ್ಸೇತುವೆ ವಿಳಂಬವಾಗುತ್ತಿದೆ ಎಂಬ ಕಾರಣಕ್ಕೆ ಬಿಬಿಎಂಪಿ ಆ ಭಾಗದ ರಸ್ತೆಗಳಿಗೆ ಡಾಂಬರು ಹಾಕಿ ವಾಹನ ಸುಗಮವಾಗಿ ಓಡಾಡಲು ಅವಕಾಶ ಕಲ್ಪಿಸಿದೆ. ಆದರೆ, ಒಳಚರಂಡಿ, ಚರಂಡಿ, ಫುಟ್‌ಪಾತ್ ಹಾಳಾಗಿದೆ. ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಕುರಿತು ತಕ್ಷಣವೇ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದರು.
ಇದನ್ನೂ ಓದಿ : ರಷ್ಯಾದ ಮೇಲೆ ಹೇರಿರುವ ನಿರ್ಬಂಧ ಎಲ್ಲಾ ಕಡೆಗಳಿಗೆ ಹಾನಿಕಾರಕ: ಚೀನಾ ಅಧ್ಯಕ್ಷ