ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಚುನಾವಣಾ ಆಯೋಗದ ತಂಡ, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪ್ರಾಥಮಿಕ ಹಂತದ ಸಭೆ ನಡೆಸಲಿದೆ.
ಕೇಂದ್ರ ತಂಡದ ಆಗಮನದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬೆಂಗಳೂರಿಗೆ ಬರುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತ ಉಮೇಶ್ ಸಿನ್ಹ ಹಾಗೂ ದಿಲೀಪ್ ಶರ್ಮ ಪ್ರಧಾನ ನಿರ್ದೇಶಕ (ಚುನಾವಣಾ ವೆಚ್ಚ) ನೇತೃತ್ವದ 6 ಜನರ ತಂಡ ಬೆಂಗಳೂರಿಗೆ ಆಗಮಿಸಲಿದ್ದು, ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದೆ.
ಇದೊಂದು ಚುನಾವಣಾ ಪೂರ್ವದ ಸಹಜ ಪ್ರಕ್ರಿಯೆ. ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರದ ತಂಡ ರಾಜ್ಯಕ್ಕೆ ಭೇಟಿ ಕೊಟ್ಟು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ವಸ್ತುಸ್ಥಿತಿಯನ್ನು ಪರಿಶೀಲಿಸುತ್ತದೆ. ಈ ಸಭೆಯಲ್ಲಿ ಯಾವುದೇ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಆಯೋಗದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.
ಸಿಎಸ್, ಡಿಐಜಿ ಜತೆ ಮಾತುಕತೆ: ಇದೇ ವೇಳೆ ಕೇಂದ್ರ ಚುನಾವಣಾ ಆಯೋಗದ ತಂಡ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.