Advertisement
ಹದಿನಾಲ್ಕು ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಮತದಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಚುನಾವಣಾ ಆಯೋಗ ಇದೀಗ ಮೇ 7ರಂದು ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಮತದಾನಕ್ಕೆ ತನ್ನನ್ನು ಸನ್ನದ್ಧಗೊಳಿಸಿದೆ. ಈ ಮಧ್ಯೆ ಉತ್ತರ ಕರ್ನಾಟಕ ಭಾಗದ ಸುಡು ಬಿಸಿಲು ಚುನಾವಣಾ ಆಯೋಗಕ್ಕೆ ಸವಾಲಾಗಿ ಪರಿಣಮಿಸಿದೆ.
ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ರಾಯಚೂರು, ಬಳ್ಳಾರಿ, ಬೀದರ್, ಬೆಳಗಾವಿ, ಉತ್ತರ ಕನ್ನಡ ಹಾಗೂ ವಿಜಯಪುರ ಕ್ಷೇತ್ರಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕಕ್ಕೆ ಹೊಂದಿಕೊಂಡ ಗಡಿ ರಾಜ್ಯದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀತಿ ಸಂಹಿತೆ ಜಾರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಈಗಾಗಲೇ ರಾಜ್ಯಕ್ಕೆ ಪ್ರವೇಶಿಸುವ ಗಡಿಗಳಲ್ಲಿ ಪೊಲೀಸ್ ನಾಕಾಗಳನ್ನು ಸ್ಥಾಪಿಸಲಾಗಿದ್ದು ಮದ್ಯ ಹಾಗೂ ಹಣದ ಸಾಗಣೆ ತಡೆಗಟ್ಟಲು ಅಬಕಾರಿ ಮತ್ತು ಐಟಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ. ಇವರಿಗೆ ಪೊಲೀಸ್ ಅಧಿಕಾರಿಗಳು ಸಹ ಸಾಥ್ ನೀಡಲಿದ್ದಾರೆ. ಅಲ್ಲದೇ ಬೆಂಗಳೂರಿನಿಂದ ಚುನಾವಣೆ ನಡೆಯಲಿರುವ ಜಿಲ್ಲೆಗಳಿಗೆ ಪ್ರವೇಶಿಸುವ ರಸ್ತೆಗಳಲ್ಲಿಯೂ ವಿಶೇಷ ನಿಗಾ ಇಡಲಾಗುತ್ತಿದೆ ಎಂದು ಆಯೋಗದ ಮೂಲಗಳು ಹೇಳಿವೆ.
Related Articles
ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಚುನಾವಣಾ ಪ್ರಕ್ರಿಯೆ ಅದರಲ್ಲೂ ವಿಶೇಷವಾಗಿ ಮತದಾನದ ದಿನ ಬಿಸಿಲಿನ ನಿರ್ವಹಣೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಮತಗಟ್ಟೆಗಳಲ್ಲಿ ಕುಡಿಯುವ ನೀರು, ಅಗತ್ಯವಿರುವ ಕಡೆ ನೆರಳಿನ ವ್ಯವಸ್ಥೆಯೂ ಮಾಡುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ. ಬಿಸಿಲು ಏರುವ ಮೊದಲೇ ಮತದಾನ ಮಾಡುವುದು ಒಳ್ಳೆಯದು ಎಂಬ ಸಂದೇಶ, ಜಾಗೃತಿಯನ್ನು ಸ್ಥಳೀಯ ಮಟ್ಟದಲ್ಲಿ ನೀಡಲಾಗುತ್ತದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ನಡೆಯುವ ಮತದಾನಕ್ಕೆ ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆ ನಡೆದು, ಅತಿ ಹೆಚ್ಚು ಮತದಾನವಾಗುವ ನಿರೀಕ್ಷೆಯಿದೆ.-ಮನೋಜ್ ಕುಮಾರ್ ಮೀನಾ, ರಾಜ್ಯ ಮುಖ್ಯ ಚುನಾವಣಾಧಿಕಾರಿ