Advertisement

ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ

12:27 AM Nov 23, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸ್ಥಳೀಯಾಡಳಿತ ಸಂಸ್ಥೆ ಚುನಾವಣಾ ಕ್ಷೇತ್ರದಿಂದ ವಿಧಾನಪರಿಷತ್‌ನ ಎರಡು ಸ್ಥಾನಗಳಿಗೆ ಡಿ. 10ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆಪಿಸಿಸಿ ಮಾಜಿ ಉಪಾಧ್ಯಕ್ಷ, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಆಯ್ಕೆಯಾಗಿದ್ದಾರೆ.

Advertisement

ಈ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದಾಗಿ ಕಳೆದ ಕೆಲವು ದಿನಗಳಿಂದ ತಲೆದೋರಿದ್ದ ಕುತೂಹಲಕ್ಕೆ ತೆರೆಬಿದ್ದಿದೆ.

ದ.ಕ.-ಉಡುಪಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಅವಕಾಶ ಬಯಸಿ 11 ಮಂದಿ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಇನ್ನೊಂದು ಹೆಸರು ಸೇರ್ಪಡೆಯಾಗಿದ್ದ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಹೊಸ ತಿರುವು ಪಡೆದುಕೊಂಡಿತ್ತು ಹಾಗೂ ಪಕ್ಷದ ಟಿಕೇಟಿಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಮಂಜುನಾಥ ಭಂಡಾರಿ ಅವರನ್ನು ಪಕ್ಷ ಆಯ್ಕೆ ಮಾಡಿದೆ.

ಇದನ್ನೂ ಓದಿ:ವಿಜಯಪುರ: ಪಕ್ಷೇತರ ಸ್ಪರ್ಧೆಯ ಭೀತಿ; ಸುನಿಲ ಗೌಡಗೆ ಕಾಂಗ್ರೆಸ್ ಟಿಕೇಟ್

ಮಂಗಳೂರಿನ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ರಾಗಿರುವ ಭಂಡಾರಿ ಅವರು ಎಂಜಿನಿಯರಿಂಗ್‌ ಪದವೀಧರಾಗಿದ್ದು ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಹಾಗೂ ಪಂಚಾಯತ್‌ರಾಜ್‌ ವ್ಯವಸ್ಥೆಯ ಬಗ್ಗೆ ಮಂಡಿಸಿರುವ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪಡೆದಿದ್ದಾರೆ.
ಈ ಹಿಂದೆ 2014ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚಿಕ್ಕಮಗಳೂರು ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ, ಯುವಕಾಂಗ್ರೆಸ್‌ ಅಖೀಲ ಭಾರತ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

Advertisement

ನಾಮಪತ್ರ: ಇಂದು ಕೊನೆಯ ದಿನ
ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದೆ. ದ.ಕ.-ಉಡುಪಿ ಕ್ಷೇತ್ರದಿಂದ ಪರಿಷತ್‌ನ 2 ಸ್ಥಾನಗಳಿಗೆ ಈವರೆಗೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಪ್ರೀತ್‌ ಕುಮಾರ್‌ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.
ನ. 24ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನ. 26ರಂದು ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next