ಮಡಿಕೇರಿ: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಹಿನ್ನೆಲೆಯಲ್ಲಿ ಮುಂಬರುವ ಜಿ.ಪಂ, ತಾ.ಪಂ., ಪುರಸಭೆ, ಪಟ್ಟಣ ಪಂಚಾಯತ್ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿ ಕೂಟದ ಮೂಲಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ.
ಜೆಡಿಎಸ್ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಸಮರ್ಥ ಕಾರ್ಯಕರ್ತರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಜಾತ್ಯತೀತ ಜನತಾದಳದ ಸದಸ್ಯತ್ವ ಅಭಿಯಾನದ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ನಗರದ ರಾಜದರ್ಶನ್ ಸಭಾಂಗಣದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಕನಿಷ್ಠ 10 ಸಾವಿರ ಸದಸ್ಯರನ್ನು ನೋಂದಾಯಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕು ಎಂದು ಕರೆ ನೀಡಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಸಂದರ್ಭ 6 ತಿಂಗಳಲ್ಲಿ 8 ಬಾರಿ ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಜತೆಗೆ ನೂರಾರು ಸಂತ್ರಸ್ತರಿಗೆ 9.80 ಲಕ್ಷ ರೂ.ಗಳಲ್ಲಿ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಟ್ಟಿದ್ದರು. ಇದು ಜೆಡಿಎಸ್ ಹೆಗ್ಗಳಿಕೆಯೂ ಆಗಿದೆ ಎಂದರು.
ಈಗ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿಯಾಗಿ ಎನ್‌ಡಿಎ ಒಕ್ಕೂಟದಲ್ಲಿದೆ. ಮುಂಬರುವ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿ ಕೂಟದ ಮೂಲಕ ಅಭ್ಯರ್ಥಿಗಳನ್ನು ಕಣಕ್ಕಿಳಿಸ ಲಾಗುತ್ತದೆ. ಜೆಡಿಎಸ್ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಅಭ್ಯರ್ಥಿಯಾಗಿ ಮಾಡಲಾಗುತ್ತದೆ. ಆ ಕಾರಣ ಜೆಡಿಎಸ್ ಪಕ್ಷದ ನೋಂದಣಿಯನ್ನು ಹೆಚ್ಚಿಸಬೇಕಿದೆ. ಕಾರ್ಯಕರ್ತರು ಶ್ರಮ ವಹಿಸಬೇಕು ಎಂದು ಕರೆ ನೀಡಿದರು. ಪ್ರಮುಖರು ಉಪಸ್ಥಿತರಿದ್ದರು.