Advertisement

ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಗೊಂದಲ

03:26 PM Feb 23, 2023 | Team Udayavani |

ಮಂಡ್ಯ: ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದಂಡು ಹೆಚ್ಚಿರುವುದರಿಂದ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಮಂಗಳವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮಂಡ್ಯ, ಮೇಲುಕೋಟೆ, ಕೆ.ಆರ್‌.ಪೇಟೆ ಕ್ಷೇತ್ರಗಳ ಆಕಾಂಕ್ಷಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

Advertisement

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 16 ಮಂದಿ, ಕೆ.ಆರ್‌.ಪೇಟೆ, ಮೇಲುಕೋಟೆಯಲ್ಲೂ ತಲಾ 6 ಮಂದಿ ಆಕಾಂಕ್ಷಿಗಳಿದ್ದಾರೆ. ಈಗಾಗಲೇ ಕಾಂಗ್ರೆಸ್‌ ಹೈಕಮಾಂಡ್‌ 150 ಮಂದಿಯ ಮೊದಲ ಪಟ್ಟಿ ಬಿಡು ಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸಮಯದಲ್ಲಿ ಗೊಂದಲ ಹಾಗೂ ಹೆಚ್ಚು ಆಕಾಂಕ್ಷಿಗಳಿರುವ ಕ್ಷೇತ್ರಗಳ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಅಭಿಪ್ರಾಯ ಮಂಡಿಸಿದ ಆಕಾಂಕ್ಷಿಗಳು: ಮಂಡ್ಯ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಗಳ ಸಭೆಯಲ್ಲಿ ಆಕಾಂಕ್ಷಿಗಳು ತಮ್ಮದೇ ಆದ ರೀತಿಯಲ್ಲಿ ಅಭಿಪ್ರಾಯ ಮಂಡಿಸಿದ್ದಾರೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿರುವ ಮುಖಂಡರಿಗೆ ಟಿಕೆಟ್‌ ನೀಡಿದರೆ ಎಲ್ಲರೂ ಒಗ್ಗಟ್ಟಾಗಿ ದುಡಿಯುತ್ತೇವೆ. ಅದು ಬಿಟ್ಟು ಟಿಕೆಟ್‌ಗಾಗಿ ವಲಸೆ ಬಂದವರಿಗೆ ಮಣೆ ಹಾಕಬಾರದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ನಾರಾಯಣಗೌಡ ಕರೆತರುವುದು ಬೇಡ: ಕೆ.ಆರ್‌. ಪೇಟೆ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಗಳ ಸಭೆಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್‌ ಸೇರ್ಪಡೆ ಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾ ಡುತ್ತಿರುವುದರಿಂದ ಗೊಂದಲ ಉಂಟಾಗಿದೆ. ಆದ್ದ ರಿಂದ ನಮ್ಮ ಆರು ಮಂದಿಯಲ್ಲಿ ಒಬ್ಬರಿಗೆ ಟಿಕೆಟ್‌ ನೀಡಿದರೆ, ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಾರಾಯಣಗೌಡರನ್ನು ಪಕ್ಷಕ್ಕೆ ಕರೆತರುವುದು ಬೇಡ ಎಂಬ ಅಭಿಪ್ರಾಯ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ನಮಲ್ಲಿ ಒಬ್ಬರಿಗೆ ಟಿಕೆಟ್‌ ನೀಡಿ: ಇನ್ನೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಆಕಾಂಕ್ಷಿತರು, ನಮ್ಮಲ್ಲೇ ಒಬ್ಬರಿಗೆ ಟಿಕೆಟ್‌ ನೀಡಿದರೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯುತ್ತೇವೆ. ಆದರೆ, ಯಾವುದೇ ಕಾರಣಕ್ಕೂ ಹೊಂದಾಣಿಕೆ ರಾಜಕಾರಣ ಅಥವಾ ರೈತ ಸಂಘಕ್ಕೆ ಬೆಂಬಲ ನೀಡುವ ನಿರ್ಧಾರ ಬೇಡ ಎಂದು ಅಭಿಪ್ರಾಯ ಮಂಡಿಸಿದ್ದಾರೆ.

Advertisement

ನೀವೇ ಅಭ್ಯರ್ಥಿ ಸೂಚಿಸಿ ಎಂದ ಡಿಕೆಶಿ: ಮೂರು ಕ್ಷೇತ್ರಗಳ ಆಕಾಂಕ್ಷಿತರ ಅಭಿಪ್ರಾಯ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಿಮ್ಮ ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿತರು ನೀವೇ ಚರ್ಚೆ ನಡೆಸಿ ಮೂವರ ಹೆಸರನ್ನು ಸೂಚಿಸಿ, ನಂತರ ಪರಿಶೀಲಿಸಿ ಒಬ್ಬರ ಹೆಸರನ್ನು ಘೋಷಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ಅದಕ್ಕೆ ಯಾವ ಆಕಾಂಕ್ಷಿತರು ಹೆಸರು ಸೂಚಿಸಲು ಮುಂದಾಗಿಲ್ಲ. ಎಲ್ಲರೂ ಆಕಾಂಕ್ಷಿತರಾಗಿರುವುದರಿಂದ ನೀವೇ ಘೋಷಿಸಿ ಎಂಬ ಸಲಹೆ ನೀಡಿದ್ದಾರೆ ಎಂಬ ಚರ್ಚೆಗಳು ನಡೆದಿವೆ.

ಒಗ್ಗಟ್ಟು ಪ್ರದರ್ಶನಕ್ಕೆ ಸೂಚನೆ: ಪಕ್ಷ ಘೋಷಿಸುವ ಅಭ್ಯರ್ಥಿಗಳಿಗೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯುವ ಮೂಲಕ ಗೆಲ್ಲಿಸಿಕೊಂಡು ಬರಬೇಕು ಎಂದು ಡಿ.ಕೆ. ಶಿವಕುಮಾರ್‌ ಆಕಾಂಕ್ಷಿಗಳಿಗೆ ಸೂಚನೆ ನೀಡಿದ್ದಾರೆನ್ನಲಾಗಿದೆ. ಯಾವುದೇ ಗೊಂದಲವಿಲ್ಲದೆ, ಭಿನ್ನಾಭಿಪ್ರಾಯಗಳನ್ನು ಮರೆತು ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೊದಲ ಪಟ್ಟಿಯಲ್ಲಿ ಜಿಲ್ಲೆ ಅಭ್ಯರ್ಥಿಗಳ ಘೋಷಿಸಿ : ಈಗಾಗಲೇ ಸಿದ್ಧಗೊಂಡಿರುವ ಮೊದಲ ಪಟ್ಟಿಯಲ್ಲಿಯೇ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವಂತೆಯೂ ಆಕಾಂಕ್ಷಿಗಳು ಮನವಿ ಮಾಡಿದ್ದಾರೆನ್ನಲಾಗಿದೆ. ಈಗಾಗಲೇ ಕೆಲವು ಕ್ಷೇತ್ರಗಳಲ್ಲಿ ಯಾವುದೇ ಗೊಂದಲವಿಲ್ಲ. ಆದರೆ, ಹೆಚ್ಚು ಆಕಾಂಕ್ಷಿಗಳಿರುವ ಕ್ಷೇತ್ರಗಳಲ್ಲಿ ಗೊಂದಲವಿದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. -ಎಚ್‌.ಶಿವರಾಜು

Advertisement

Udayavani is now on Telegram. Click here to join our channel and stay updated with the latest news.

Next