ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಶಿಕ್ಷಕರ ಹಾಗೂ ಪದವೀಧರರ ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಭಿಪ್ರಾಯ ಸಂಗ್ರಹಿಸಲು ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ, ವಿಜಯಪುರ, ಚಿಕ್ಕೋಡಿ ಹಾಗೂ ಬಾಗಲಕೋಟೆ ಜಿಲ್ಲೆಯನ್ನೊಳಗೊಂಡ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಭಿಪ್ರಾಯ ಸಂಗ್ರಹಿಸಲು ಆಹಾರ ಮತ್ತು ನಾಗರೀಕ ಪೂರೈಕೆ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಅ.ದೇವೇಗೌಡ, ಪುಟ್ಟಣ್ಣ, ಮುನಿರಾಜುಗೌಡ ಅವರನ್ನು ನೇಮಿಸಲಾಗಿದೆ.
ಹುಬ್ಬಳ್ಳಿ-ಧಾವರಾಡ, ಧಾರವಾಡ ಗ್ರಾಮೀಣ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕುರಿತಂತೆ ಜವಳಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಅರುಣ್ ಶಹಾಪುರ, ಡಾ| ಶಿವಯೋಗಿ ಸ್ವಾಮಿ, ಮೈ.ವಿ. ರವಿಶಂಕರ ಅವರನ್ನು ನೇಮಿಸಲಾಗಿದೆ.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 451 ಹೊಸ ಪ್ರಕರಣ | 1455 ಸೋಂಕಿತರು ಗುಣಮುಖ
ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಪದವೀಧರ ಕ್ಷೇತ್ರದ ಉಸ್ತುವಾರಿಯನ್ನಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಚಿವ ಕೆ. ನಾರಾಯಣ ಗೌಡ, ಅಶ್ವತ್ಥನಾರಾಯಣ, ಎಸ್.ವಿ. ಸಂಕನೂರು, ವೈ.ಎ. ನಾರಾಯಣಸ್ವಾಮಿ ಹಾಗೂ ಹನುಮಂತ ನಿರಾಣಿ ಅವರನ್ನು ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.