ಮೈಸೂರು: ಎರಡನೇ ಹಂತದಲ್ಲಿ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಎಂಟು ಜಿಲ್ಲೆಗಳ ಸಿದ್ಧತೆಗಳನ್ನು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿ.ಎನ್. ಶ್ರೀನಿವಾಸಚಾರಿ ಅವರು ಪರಿಶೀಲಿಸಿದರು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಿದ ಅವರು, ಮುಖ್ಯವಾಗಿ ಇವಿಎಂಗಳ ದಾಸ್ತಾನು ಹಾಗೂ ಅಗತ್ಯಕ್ಕೆ ಅನುಗುಣವಾಗಿ ಲಭ್ಯತೆ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು. 2018ರಲ್ಲಿ ನಡೆದ ಮೊದಲ ಹಂತದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೇರ್ಪಡೆಯಾಗದ ನಗರಗಳಲ್ಲಿ ಈ ವರ್ಷ ಚುನಾವಣೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.
ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡುವುದು, ಚುನಾವಣೆಗೆ ಎಲ್ಲಾ ನಗರಗಳಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇಮಿಸುವುದು. ಅವರು ಪ್ರತಿ ಮತಗಟ್ಟೆಗೆ ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡುವುದು ಮುಂತಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರುಗಳಿಗೆ ತಿಳಿಸಿದರು.
ಮೈಸೂರು ಜಿಲ್ಲೆಯಲ್ಲಿ 2019ರಲ್ಲಿ ನಂಜನಗೂಡು ನಗರಸಭೆ, ಹುಣಸೂರು ನಗರಸಭೆ, ಕೆ.ಆರ್.ನಗರ ಪುರಸಭೆ ಹಾಗೂ ಬನ್ನೂರು ಪುರಸಭೆಗೆ ಚುನಾವಣೆ ನಡೆಯಲಿದೆ. ಈ ಸ್ಥಳೀಯ ಸಂಸ್ಥೆಗಳಲ್ಲಿ ನಡೆದಿರುವ ಸಿದ್ಧತೆಗಳ ಬಗ್ಗೆ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ ಮಾಹಿತಿ ನೀಡಿದರು.
ಸಭೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಕೊಡಗು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಹಾಸನ ಅಪರ ಜಿಲ್ಲಾಧಿಕಾರಿ ವೈಶಾಲಿ, ಮಂಗಳೂರು ನಗರ ಪೊಲೀಸ್ ಆಯುಕ್ತರು, ಈ ಎಲ್ಲಾ ಜಿಲ್ಲೆಗಳ ಪೊಲೀಸ್ ಅಧೀಕ್ಷಕರು ಭಾಗವಹಿಸಿದ್ದರು.