Advertisement

11ರಿಂದ 13ರ ವರೆಗೆ ಪ್ರತಿಬಂಧಕಾಜ್ಞೆ ಜಾರಿ

04:38 PM Jun 07, 2022 | Team Udayavani |

ಹಾವೇರಿ: ಕರ್ನಾಟಕ ವಿಧಾನ ಪರಿಷತ್‌ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ-2022ಕ್ಕೆ ಸಂಬಂಧಿ ಸಿದಂತೆ ಜೂ.13ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಸುಗಮ ಹಾಗೂ ಮುಕ್ತ ಚುನಾವಣೆ ಹಿತದೃಷ್ಟಿಯಿಂದ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

Advertisement

ಜೂ.11ರ ಸಂಜೆ 4ಗಂಟೆಯಿಂದ ಜೂ.13ರ ಸಂಜೆ 4ಗಂಟೆವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಮತಗಟ್ಟೆಗಳ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದು ನಿಷೇಧಿಸಲಾಗಿದೆ.

ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರನ್ನು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯ ಮಾಡುವ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್‌ ಅಂಗಡಿ, ಬುಕ್‌ಸ್ಟಾಲ್‌, ಸೈಬರ್‌ ಕೆಫೆಗಳನ್ನು ನಿರ್ಬಂಧಿಸಲಾಗಿದೆ.

ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್‌ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಕಲ್ಲು, ಕ್ಷಾರ ಪದಾರ್ಥ ಇಲ್ಲವೇ ಸ್ಫೋಟಕ ವಸ್ತುಗಳು ಅಥವಾ ಯವುದೇ ದಾಹಕ ವಸ್ತುಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

Advertisement

ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸೊ#ಧೀಟಕ ವಸ್ತು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ, ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌-19ರ ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್‌ ಮಾರ್ಗಸೂಚಿಗಳನ್ನು ಹಾಗೂ ನಿಯಮಗಳನ್ನು ಪಾಲಿಸಬೇಕು.

ಮತದಾನದ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ಮೊಬೈಲ್‌ ಫೋನ್‌, ಕಾರ್ಡ್‌ಲೆಸ್‌ ಫೋನ್‌ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿ ಕಾರಿಗಳು ಅಥವಾ ಸಿಬ್ಬಂದಿ ಹೊರತುಪಡಿಸಿ).

ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್‌ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂ ಧಿಸಿದ ಪೋಸ್ಟರ್‌, ಬ್ಯಾನರ್‌, ಧ್ವನಿವರ್ಧಕಗಳು ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಕೋವಿಡ್‌ -19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ತಿಳಿಸಿದ್ದಾರೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿ ಮುಂತಾದವುಗಳನ್ನು ಪ್ರದರ್ಶಿಸುವುದು, ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.  -ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next